ಆಪಾದಿತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದ ಮಾಜಿ ಆಯುಕ್ತರಾಗಿರುವ ನಟೇಶ್ ಮತ್ತು ದಿನೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮೈಸೂರಿನ ಕೃಷ್ಣರಾಜ ವಿಧಾನದಭಾ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ದೂರು ನೀಡಿದ್ದಾರೆ.
ಮುಡಾ ಅಕ್ರಮ ನಿವೇಶನ ಹಂಚಿಕೆಯಲ್ಲಿ ನಟೇಶ್ ಮತ್ತು ದಿನೇಶ್ ಕುಮಾರ್ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಶ್ರೀವತ್ಸ ಆಗ್ರಹಿಸಿದ್ದಾರೆ.
“ನಾನು (ಶ್ರೀವತ್ಸ್) ಮುಡಾದ ಸದಸ್ಯನಾಗಿದ್ದಾಗ ಪ್ರಾಧಿಕಾರದ ನಿವೇಶನಗಳನ್ನು ಕಾನೂನು ಬಾಹಿರ ಮತ್ತು ಅಕ್ರಮವಾಗಿ 50:50 ಅನುಪಾತದಲ್ಲಿ ಹಂಚಿಕೆ ಮಾಡಲಾಗಿದೆ. ಅಕ್ರಮವಾಗಿ ಸುಮಾರು 5.00 ಲಕ್ಷ ಚದುರ ಅಡಿ ನಿವೇಶನ ಹಂಚಿಕೆಯಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಸುಮಾರು 5,000 ಕೋಟಿಗಳಷ್ಟು ನಷ್ಟವಾಗಿದೆ. ಅಕ್ರಮವಾಗಿ ಹಂಚಿಕೆಯಾಗಿರುವ ನಿವೇಶನಗಳ ಹಂಚಿಕೆ ಆದೇಶವನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.
“ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ನಟೇಶ್ ಮತ್ತು ದಿನೇಶ್ ಕುಮಾರ್ ವಿರುದ್ಧ ತನಿಖೆ ನಡೆಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು” ಎಂದು ಆಗ್ರಹಿಸಿದ್ದಾರೆ.