ಮಾನ್ವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದರಿಂದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರದ್ದುಗೊಳಿಸಿ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಶಾಲಾ ಶಿಕ್ಷಣ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿ ಬಾಫುಲೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಮೃತ ವಿದ್ಯಾರ್ಥಿಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ರದ್ದುಪಡಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರು ಮೃತರ ವಿದ್ಯಾರ್ಥಿಗಳಿಗೆ ಹಾಗೂ ಕಳೆದ ಎರಡು ದಿನದ ಹಿಂದೆ ಹೃದಯಾಘಾತದಿಂದ ಮೃತಪಟ್ಟ ಶಿಕ್ಷಕ ಲಕ್ಷ್ಮಿ ರೆಡ್ಡಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಶಾಲಾ ವಾಹನ ಮತ್ತು ಸಾರಿಗೆ ಬಸ್ ನಡುವೆ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 25ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸಾ ನೀಡಲಾಗುತ್ತಿದೆ. ಶೋಕ ಆಚರಿಸಿದ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆ ನಡೆಸುವುದು ಸೂಕ್ತವಲ್ಲ ಎಂದು ನಿರ್ಧರಿಸಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯನ್ನು ರದ್ದುಪಡಿಸಲಾಗುತ್ತದೆ. ತಾಲೂಕು ಮಟ್ಟದಲ್ಲಿ ಆಚರಣೆ ಮಾಡಲು ತಿಳಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ಶಾಲಾ ಬಸ್ ಅಪಘಾತ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ
ನಂತರ ಮಾತನಾಡಿದ ಡಿಡಿಪಿಐ ಕೆಡಿ ಬಡಿಗೇರ ಮಾತನಾಡಿ, ಮಕ್ಕಳು ಮತ್ತು ಪೋಷಕರು ದುಃಖದಲ್ಲಿರುವ ಸಂದರ್ಭದಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಮಾಡುವುದು ಸೂಕ್ತವಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ರದ್ದುಪಡಿಸಲಾಗಿದೆ. ತಾಲೂಕಿನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ನಡೆಸಿ, ತಾಲೂಕವಾರು ಶಿಕ್ಷಕರ ಪ್ರಶಸ್ತಿ ನೀಡಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯಗುರು, ಶಿಕ್ಷಕರು, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರ ಭಾಗವಹಿಸಿದ್ದರು.
