ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆ ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ವಿಜಯಪುರ ನಗರದ ಸಮಾಜ ಕಲ್ಯಾಣ ಇಲಾಖೆಗೆ ಮುತ್ತಿಗೆ ಹಾಕಿದ ವೇಳೆ ಅಕ್ಷಯಕುಮಾರ ಅಜಮನಿ ಮಾತನಾಡಿ, “ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಪಿಇಟಿಸಿ ಸಂಸ್ಥೆ ನಡೆಸುವ ಪ್ರವೇಶ ಪರೀಕ್ಷೆ ಮೂಲಕ ಉತ್ತೀರ್ಣರಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ವಿಜಯಪುರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿರುವ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಯಾವ ರೀತಿಯಲ್ಲಿಯೂ ಸೂಕ್ತವಾದ ಅರ್ಹತೆ ಹೊಂದಿಲ್ಲ” ಎಂದು ಆರೋಪಿಸಿದರು.
“ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆಯ್ಕೆಯಾದ ಪರೀಕ್ಷಾರ್ಥಿಗಳಿಗೆ ನಿಯಮದ ಪ್ರಕಾರ ತೆರಬೇತಿ ನೀಡದೇ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡು ಮೋಸ ನಡೆಯುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಈ ಸಂಸ್ಥೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಜತೆಗೆ ಈ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಒತ್ತಾಯಿಸಿದರು.
“ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ವತಿಯಿಂದ ನಡೆಯುವ ಪ್ರದೇಶ ಪರೀಕ್ಷೆಗೆ ಹಗಲು ರಾತ್ರಿ ಎನ್ನದೆ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಾರೆ. ಹಲವು ಕನಸುಗಳನ್ನು ಹೊತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಬರುತ್ತಾರೆ. ಆದರೆ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಉತ್ತಮ ತರಬೇತಿ ನೀಡುವಲ್ಲಿ ವಿಫಲವಾಗಿದೆ” ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಲಾ ಬಸ್ ಅಪಘಾತ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ
“ಪ್ರತಿಭಟನೆ ಬಳಿಕ ಸದರಿ ಸಂಸ್ಥೆಯ ಮೋಸದ ಜಾಲದ ಬಗ್ಗೆ ಗಂಭೀರವಾಗಿ ಗಮನಹರಿಸಿ, ಈ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಸಂಸ್ಥೆಗೆ ನೀಡಲಾದ ಅನುದಾನವನ್ನು ಮರಳಿ ಪಡೆಯುವ ಜೊತೆಗೆ ಟೆಂಡರ್ ರದ್ದುಗೊಳಿಸಬೇಕು. ಕಾನೂನಾತ್ಮಕವಾಗಿ ಇಲಾಖೆ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಹಾಗೂ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.