ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘವು 125 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 18 ಮತ್ತು 19 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ 2 ದಿನಗಳ ಕಾಲ ಶತಮಾನೋತ್ತರ ರಜತ ಸಂಭ್ರಮವನ್ನು ಆಚರಿಸಲು ಉಡುಪಿ ವಕೀಲರ ಸಂಘ ನಿರ್ಧರಿಸಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ತಿಳಿಸಿದರು.
ನವೆಂಬರ್ 17 ರಂದು ಬೆಳಗ್ಗೆ 9.30 ಕ್ಕೆ ನಗರದ ಜೋಡುಕಟ್ಟೆಯಿಂದ ಅತಿಥಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು, ಮೆರವಣಿಗೆ ಮೂಲಕ ಜಿಲ್ಲಾ ನ್ಯಾಯಾಲಯ ತಲುಪುತ್ತೇವೆ. ಬೆಳಗ್ಗೆ 10 ಗಂಟೆಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.
ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಆಂಧ್ರಪ್ರದೇಶದ ರಾಜ್ಯಪಾಲ, ಸುಪ್ರೀಂಕೋರ್ಟ್ ನ ವಿಶ್ರಾಂತ ನ್ಯಾಯಾಧೀಶ ಅಬ್ದುಲ್ ನಝೀರ್ ಭಾಗವಹಿಸಲಿದ್ದಾರೆ.
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. 18 ರಂದು ಸಂಜೆ 4 ಗಂಟೆಗೆ ಸಮಾರೋಪ ಭಾಷಣ ಮಾಡಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಈ ಸುದ್ಧಿ ಓದಿದ್ದೀರಾ ಉಡುಪಿ | ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ: ಇಬ್ಬರ ಬಂಧನ
ಪತ್ರಿಕಾಗೋಷ್ಠಿಯಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷ ಬಿ.ನಾಗರಾಜ್, ಪ್ರ.ಕಾರ್ಯದರ್ಶಿ ರಾಜೇಶ್ ಎ.ಆರ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.