ಮಳವಳ್ಳಿ ಗಗನಚುಕ್ಕಿ ಜಲಪಾತೋತ್ಸವದಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಮಾಜಿ ಶಾಸಕ ಡಾ. ಕೆ. ಅನ್ನದಾನಿ ನೀಡಿರುವ ಹೇಳಿಕೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಮಳವಳ್ಳಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಂಬಾಡಿ ಅಣೆಕಟ್ಟೆ ಸಂಪೂರ್ಣವಾಗಿ ತುಂಬಿರುವುದರಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಆ ನೀರಿನಿಂದಲೇ ಜಲಪಾತೋತ್ಸವವನ್ನು ಆಯೋಜಿಸಲಾಗುತ್ತಿದೆ. ರಾಜಕೀಯ ಲಾಭಕ್ಕಾಗಿ ಅನ್ನದಾನಿ ಪ್ರಾಮಾಣಿಕತೆಗೆ ಧಕ್ಕೆಯೊಡ್ಡುವ ಹೇಳಿಕೆಗಳನ್ನು ನೀಡುತ್ತಾ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು.
ಮಾಜಿ ಶಾಸಕ ಡಾ. ಕೆ. ಅನ್ನದಾನಿಯ ಕಪ್ಪು ಬಾವುಟ ಪ್ರದರ್ಶನದ ಬೆದರಿಕೆಯನ್ನು ಖಂಡಿಸಿರುವ ಅವರು, ಕಾಂಗ್ರೆಸ್ ಕಾರ್ಯಕರ್ತರು ಕೂಡ ಇಂತಹ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಬಾವುಟ ಹಿಡಿದು ಅನ್ನದಾನಿ ವಿರುದ್ಧ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ. ರಾಜು ಮಾತನಾಡಿ, “ಅನ್ನದಾನಿ ಹತಾಶೆಯಿಂದ ಹೇಳಿಕೆ ನೀಡುತ್ತಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದರು” ಎಂದು ಆರೋಪಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಹನಿಟ್ರ್ಯಾಪ್ ಪ್ರಕರಣ: ದಲಿತ ಸೇನೆಯ ರಾಜ್ಯಾಧ್ಯಕ್ಷ ಯಳಸಂಗಿ ಸೇರಿ 6 ಮಂದಿ ಪೊಲೀಸರಿಗೆ ಶರಣು
ತಾ.ಪಂ ಮಾಜಿ ಉಪಾಧ್ಯಕ್ಷ ಸಿ. ಮಾಧು, “ಪ್ರಸಕ್ತ ವರ್ಷ ಕನ್ನಂಬಾಡಿ ತುಂಬಿದ್ದು, ಜಲಪಾತೋತ್ಸವ ನಡೆಸಲು ಯಾವುದೇ ತೊಡಕು ಇಲ್ಲ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಇದು ಸರಿಯಾದ ಹೊತ್ತು” ಎಂದು ಅಭಿಪ್ರಾಯಪಟ್ಟರು.
ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ಅಂಬರೀಷ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಚಿಕ್ಕಲಿಂಗಯ್ಯ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಆರ್.ಎನ್ ವಿಶ್ವಾಸ್ ಸೇರಿದಂತೆ ಇತರರು ಹಾಜರಿದ್ದರು.
