ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವಿರುದ್ಧ ವೈದ್ಯರು ಪ್ರತಿಭಟನೆಗೆ ಇಳಿದಿದ್ದು, ರೋಗಿಗಳು ಪರದಾಡುವಂತಾಗಿದೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅನಾರೋಗ್ಯಕ್ಕೆ ತುತ್ತಾಗಿದ್ದ ತನ್ನ ಸಹೋದರನನ್ನು ಮಹಿಳೆ ಮತ್ತು ಆಕೆಯ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಮಹಿಳೆಯ ಸಹೋದರನನ್ನು ಮೂಳೆ ತಜ್ಞ ವೆಂಕಟೇಶ್ ಪರೀಕ್ಷಿಸಿದ್ದಾರೆ. ಈ ವೇಳೆ, ವಾರ್ಡ್ ಒಳಗೆ ಮಹಿಳೆಯ ಸಂಬಂಧಿಕರು ನುಗ್ಗಿದ್ದಾರೆ. ಅವರನ್ನು ಹೊರ ಹೋಗುವಂತೆ ವೈದ್ಯರು ತಿಳಿಸಿದ್ದು, ಮಾತಿಗೆ ಮಾತು ಬೆಳೆದು, ಮಹಿಳೆ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಯ ಘಟನೆಯನ್ನು ಕೆಲವನ್ನು ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಹಲ್ಲೆಯಿಂದಾಗಿ, ವೈದ್ಯರು ಮತ್ತು ಸಿಬ್ಬಂದಿಗಳು ಹೊರರೋಗಿಗಳ ವಿಭಾಗವನ್ನು ಮುಚ್ಚಿದ್ದು, ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಮಗಳೂರು ಪೊಲೀಸರು ಮಹಿಳೆ ಮತ್ತು ಆಕೆಯ ಸಹೋದರನನ್ನು ಬಂಧಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದರಿಂದಾಗಿ ಚಿಕಿತ್ಸೆಗಾಗಿ ಬಂದಿದ್ದ ರೋಗಿಗಳು ಪರದಾಡುವಂತಾಗಿದೆ. ವೈದ್ಯ ವೆಂಕಟೇಶ್ ಮೇಲೆ ಹಲ್ಲೆ ನಡೆಸಿದ, ಎಲ್ಲರನ್ನೂ ಬಂಧಿಸುವವರೆಗೆ ನಾವು ಕರ್ತವ್ಯಕ್ಕೆ ಹಾಜರಾಗುವುದಿಲ್ಲವೆಂದು ಆಸ್ಪತ್ರೆಯ ಸಿಬ್ಬಂದಿಗಳು ಪಟ್ಟುಹಿಡಿದಿದ್ದಾರೆ.