ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಝಾಕಿರ್ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಹೇಳಿದೆ.
ಕುಸಿದು ಬಿದ್ದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಆರು ವರ್ಷದ ಬಾಲಕ ಸೋಫಿಯಾನ್‌ನನ್ನು ರಕ್ಷಿಸಲಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಓರ್ವ ವ್ಯಕ್ತಿ ಅವಶೇಷಗಳಡಿ ಸಿಲುಕಿದ್ದಾನೆ ಎಂದು ಜಿಲ್ಲಾಡಳಿತ ಶಂಕೆ ವ್ಯಕ್ತಪಡಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ನಾಲ್ವರನ್ನು ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಮೀರತ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಿ.ಕೆ ಠಾಕೂರ್, ವಿಭಾಗೀಯ ಕಮಿಷನರ್ ಸೆಲ್ವ ಕುಮಾರಿ ಜೆ, ಪೊಲೀಸ್ ಮಹಾನಿರೀಕ್ಷಕ ನಚಿಕೇತ ಝಾ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಾಡಾ ಸೇರಿದಂತೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.