ಅಂರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರಂದು ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಾಣ ಮಾಡಲಾಗಿದ್ದು, ವಿಶಿಷ್ಟ ದಾಖಲೆಯನ್ನು ನಿರ್ಮಿಸಲಾಗಿದೆ. ಮಾನವ ಸರಪಳಿ ಕಾರ್ಯಕ್ರಮಕ್ಕೆ ಧಾರವಾಡ ಜಿಲ್ಲೆಯಲ್ಲಿ 3.5 ಲಕ್ಷ ಜನರು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದರು ಎಂದು ಸಚಿವ ಸಂತೋಷ್ ಲಾಡ್ ಹರ್ಷ ವ್ಯಕ್ತಪಡಿಸಿದರು.
ಧಾರವಾಡ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, “ಮಾನವ ಸರಪಳಿಯಲ್ಲಿ ಜಿಲ್ಲೆಯು ಇಡೀ ರಾಜ್ಯದಲ್ಲೇ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಇಂತಹ ಬೃಹತ್ ಮಾನವ ಸರಪಳಿ ನಿರ್ಮಾಣದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಾಕ್ಷಿಯಾದ ಎಲ್ಲರಿಗೂ ಧನ್ಯವಾದಗಳು” ಎಂದರು.
“ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ ಶಕ್ತಿಯಾಗಿದೆ. ಡಾ. ಬಿ ಆರ್ ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ದೊರೆಯುವಂತೆ ಮಾಡಿದ್ದಾರೆ. ಪ್ರತಿಯೊಬ್ಬರೂ ದೇಶದ ಏಕತೆಯನ್ನು ಕಾಪಾಡಿಕೊಂಡು ಹೋಗಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿ, “2007ರಲ್ಲಿ ಜರುಗಿದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೆಪ್ಟೆಂಬರ್ 15ರ ದಿನವನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವೆಂದು ಘೋಷಣೆ ಮಾಡಲಾಗಿದೆ. ವಿಶ್ವಾದ್ಯಂತ ಪ್ರಜಾಪ್ರಭುತ್ವದ ಮೌಲ್ಯಗಳು, ಆದರ್ಶಗಳು, ತತ್ವಗಳು ಮತ್ತು ಅದರ ಅನ್ವಯಿಕತೆಯನ್ನು ಒಳಗೊಂಡ ಬೃಹತ್ ನಿರ್ಣಯ ಹೊರಡಿಸಿದ ಸೆಪ್ಟೆಂಬರ್ 15 ಐತಿಹಾಸಿಕ ದಿನವಾಗಿದೆ. ಪ್ರಜಾಪ್ರಭುತ್ವದ ಮೂಲಭೂತ ಹಕ್ಕು ಮತ್ತು ಸಾರ್ವತ್ರಿಕ ಮೌಲ್ಯವಾಗಿದೆ. ಪ್ರಜಾಪ್ರಭುತ್ವ ರಕ್ಷಿಸುವುದು, ಅದರ ಮೌಲ್ಯಗಳನ್ನು ಉತ್ತೇಜಿಸಿವುದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಉದ್ದೇಶವಾಗಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಡಾ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಗಳಿಗೆ ಗಣ್ಯರು ಪುಷ್ಪ ನಮನ ಅರ್ಪಿಸಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ ಅವರು ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕರಾದ ಪ್ರಸಾದ ಅಬ್ಬಯ್ಯ, ಶಾಸಕ ಎನ್ ಎಚ್ ಕೋನರೆಡ್ಡಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಮಾಜಿ ಸಂಸದ ಐ ಜಿ ಸನದಿ, ಹುಬ್ಬಳ್ಳಿ ಧಾರವಾಡ ಮಹಾನಗರದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ ಬಿ ಗುಡಸಿ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ ಎಲ್ ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ, ಡಿಡಿಪಿಐ ಎಸ್ ಎಸ್ ಕೆಳದಿಮಠ, ವಿವಿಧ ಇಲಾಖಾ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ವಿವಿಧ ಶಾಲೆ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.