ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಮಾಲೋಚನೆಯ ಸಂದರ್ಭದಲ್ಲಿ ‘ಒಂದು ದೇಶ ಒಂದು ಚುನಾವಣೆ’ ಕಲ್ಪನೆಯನ್ನು ವಿರೋಧಿಸಿದವರಲ್ಲಿ ಮೂವರು ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಒಬ್ಬ ಮಾಜಿ ರಾಜ್ಯ ಚುನಾವಣಾ ಆಯುಕ್ತರು ಸೇರಿದ್ದಾರೆ ಎಂದು ವರದಿಯಾಗಿದೆ.
ನಾಲ್ವರು ಮಾಜಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಮತ್ತು ನ್ಯಾಯಮೂರ್ತಿ ಯು ಯು ಲಲಿತ್ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಕ್ರಿಯೆಯ ಪರವಾಗಿದ್ದರು ಎಂದು ಕೋವಿಂದ್ ಸಮಿತಿಯ ವರದಿ ತಿಳಿಸಿದೆ.
ಬುಧವಾರ ಕೇಂದ್ರ ಸಚಿವ ಸಂಪುಟ ಒಂದು ದೇಶ ಒಂದು ಚುನಾವಣೆಯ ವರದಿಯನ್ನು ಅಂಗೀಕರಿಸಿದೆ. ಈ ವರದಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಶಿಫಾರಸು ಮಾಡಿದೆ. ಅದಾದ ಬಳಿಕ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸಲು ಶಿಫಾರಸು ಮಾಡಿದೆ.
ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಗಳಲ್ಲಿ ಒಂಬತ್ತು ಮಂದಿ ಒಂದು ದೇಶ ಒಂದು ಚುನಾವಣೆಗೆ ಬೆಂಬಲ ನೀಡಿದರೆ, ಮೂವರು ಆಕ್ಷೇಪಣೆಯನ್ನು ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ? ‘ಒಂದು ದೇಶ ಒಂದು ಚುನಾವಣೆ’ಗೆ ಕೇಂದ್ರ ಸಚಿವ ಸಂಪುಟ ಅಸ್ತು
ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಅವರು ಏಕಕಾಲಿಕ ಚುನಾವಣೆಯ ಪರಿಕಲ್ಪನೆಯನ್ನು ವಿರೋಧಿಸಿದ್ದಾರೆ. “ಇದು ಮತದಾನದ ಮಾದರಿಯನ್ನು ಬದಲಾಯಿಸುತ್ತದೆ” ಎಂದು ಹೇಳಿದ ಅವರು, ರಾಜ್ಯ ಮಟ್ಟದ ರಾಜಕೀಯ ಬದಲಾವಣೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
“ಏಕಕಾಲದಲ್ಲಿ ಚುನಾವಣೆ ನಡೆಸುವುದು ರಾಜಕೀಯ ಹೊಣೆಗಾರಿಕೆಗೆ ಅಡ್ಡಿಯಾಗುತ್ತವೆ. ಸ್ಥಿರ ನಿಯಮಗಳು ಅನಗತ್ಯ ಸ್ಥಿರತೆಯನ್ನು ತರುತ್ತದೆ. ಪ್ರಜಾಪ್ರಭುತ್ವದ ತತ್ವಗಳಿಗೆ ಸವಾಲೊಡುತ್ತದೆ” ಎಂದು ಅಭಿಪ್ರಾಯಿಸಿದ್ದಾರೆ.
ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಗಿರೀಶ್ ಚಂದ್ರ ಗುಪ್ತಾ ಕೂಡಾ ಏಕಕಾಲದಲ್ಲಿ ಚುನಾವಣೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. “ಈ ಕಲ್ಪನೆಯು ಪ್ರಜಾಪ್ರಭುತ್ವದ ತತ್ವಗಳಿಗೆ ಅನುಕೂಲಕರವಾಗಿಲ್ಲ” ಎಂದು ಹೇಳಿದ್ದಾರೆ.
ಮದ್ರಾಸ್ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಕೂಡಾ ಏಕಕಾಲಿಕ ಚುನಾವಣೆಗಳು ಭಾರತದ ಫೆಡರಲ್ ರಚನೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಪ್ರಾದೇಶಿಕ ಸಮಸ್ಯೆಗಳ ಪೂರ್ವಾಗ್ರಹ ಉಂಟುಮಾಡುತ್ತದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.
