ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬೆದರಿಕೆ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.ಸಂತ್ರಸ್ತೆ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಎಚ್‌ಡಿಕೆ -ಯಡಿಯೂರಪ್ಪ ಜಂಟಿ ಹಗರಣ | ಕುಮಾರಸ್ವಾಮಿ ರಾಜೀನಾಮೆಗೆ ಸಚಿವರ ಒತ್ತಾಯ
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದವು.
ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ಮುಗಿದು ಮಾಜಿ ಸಚಿವರು ಜೈಲು ಸೇರಿದ ಬೆನ್ನಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಮತ್ತೆ ಬಂಧಿಸಲಾಗಿದೆ.
