ಗ್ಯಾರಂಟಿ ಯೋಜನೆ ಲಾಭವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕ್ರಮ ವಹಿಸಬೇಕು. ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಬೆಳಗಾವಿಯ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಒಂದು ವರ್ಷವಾಗಿದೆ. ಇವುಗಳಿಗೆ ಸಂಬಂಧಿಸಿ ಯಾವುದೇ ದೂರುಗಳಿದ್ದರೆ, ಜಿಲ್ಲಾ ಮತ್ತು ತಾಲೂಕು ಹಂತದ ಅಧಿಕಾರಿಗಳು ಸ್ಪಂದಿಸಬೇಕು. ಸಮಿತಿಯವರು ತಾಲೂಕು ಹಂತದಲ್ಲಿ ಜನರೊಂದಿಗೆ ಸಂವಾದ ನಡೆಸಿ, ಗ್ಯಾರಂಟಿ ಯೋಜನೆ ಲಾಭವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜನರಿಗೆ ನೆರವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮತ್ತು ಸಮಿತಿ ಪದಾಧಿಕಾರಿಗಳು ಶ್ರಮಿಸಬೇಕು. ಒಬ್ಬ ಫಲಾನುಭವಿಯೂ ಯೋಜನೆಯಿಂದ ವಂಚಿತವಾಗಬಾರದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.
ಇದನ್ನು ಓದಿದ್ದೀರಾ? ಬೆಳಗಾವಿ | ಪ್ರತಿಯೊಂದು ಮಗುವಿಗೂ ಗುಣಾತ್ಮಕ, ಸಮಾನ ಶಿಕ್ಷಣದ ಅವಶ್ಯವಿದೆ: ನಿವೃತ್ತ ನ್ಯಾ. ನಾಗಮೋಹನ ದಾಸ್
ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ‘ಸಮಾಜದಲ್ಲಿ ಪ್ರತಿಯೊಬ್ಬರಿಗೂ ನೆರವಾಗುವ ದಿಸೆಯಿಂದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯವಿದೆ’ ಎಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಇದ್ದರು.