ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸರ್ಕಾರ ಆದೇಶಿಸಿದೆ.
ಸಚಿವರಾದ ಕೃಷ್ಣ ಬೈರೇಗೌಡ, ಡಾ. ಎಂ ಸಿ ಸುಧಾಕರ್ ನೇತೃತ್ವದಲ್ಲಿ ಕಾಂಗ್ರೆಸ್ಸಿನ ಒಕ್ಕಲಿಗ ಸಮುದಾಯದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿಯಾಗಿ ಮಾಜಿ ಸಚಿವ ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಿದ್ದರು.
ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳ ಗಂಭೀರತೆಯನ್ನು ಅರಿತು ಸರ್ಕಾರ ಸಿಐಡಿಯ ಅಪರ ಪೊಲೀಸ್ ಮಹಾನಿರ್ದೇಶಕ ಬಿ ಕೆ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದೆ. ಈ ವಿಶೇಷ ತನಿಖಾ ತಂಡದಲ್ಲಿ ಬೆಂಗಳೂರು ಕೇಂದ್ರ ವಲಯದ ಪೊಲೀಸ್ ಮಹಾನಿರ್ದೇಶಕ ಲಭುರಾಮ್, ಬೆಂಗಳೂರು ರೈಲ್ವೇಸ್ ಪೊಲೀಸ್ ಅಧೀಕ್ಷಕರಾದ ಸೌಮ್ಯಲತ, ಪೊಲೀಸ್ ಅಧೀಕ್ಷಕ ಸಿ ಎ ಸೈಮನ್ ಸದಸ್ಯರಾಗಿ ನೇಮಕವಾಗಿದ್ದಾರೆ.
ಶಾಸಕ ಮುನಿರತ್ನ ವಿರುದ್ಧ ಬೆಂಗಳೂರು ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿವೆ. ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವರು ಜಾತಿ ನಿಂದನೆ ಮತ್ತು ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ತೆಗೆದುಕೊಂಡ ಹೊರಬಂದಿದ್ದ ಮುನಿರತ್ನ ಅವರನ್ನು ಕೂಡಲೇ ಅತ್ಯಾಚಾರ ಪ್ರಕರಣದಡಿ ಮತ್ತೆ ಪೊಲೀಸರು ಬಂಧಿಸಿದ್ದಾರೆ. 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಶಾಸಕ ಮುನಿರತ್ನ ಇದ್ದಾರೆ.