ನ್ಯಾಯಾಲಯದ ಕಲಾಪದ ವೇಳೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಹೈಕೋರ್ಟ್‌ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಷಾನಂದ ಅವರು ಶನಿವಾರ ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.
ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಸುಪ್ರೀಂ ಕೋರ್ಟ್‌ನ ಅನಪೇಕ್ಷಿತ ಗಮನವನ್ನು ತಮ್ಮೆಡೆಗೆ ಸೆಳೆದುಕೊಂಡಿದ್ದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ತಮ್ಮ ಹೇಳಿಕೆಗಳಿಗೆ ವಿಷಾದ ಸೂಚಿಸಿದ್ದಾರೆ.
ಪ್ರಕರಣವೊಂದರ ವಿಚಾರಣೆಯ ವೇಳೆ, ಬೆಂಗಳೂರಿನ ಮುಸ್ಲಿಂ ಬಾಹುಳ್ಯವಿರುವ ಪ್ರದೇಶವಾದ ಗೋರಿಪಾಳ್ಯದ ಕ್ರಿಮಿನಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹೆದರುತ್ತಿದ್ದಾರೆ. ಏಕೆಂದರೆ ಅದು ಪಾಕಿಸ್ತಾನದಲ್ಲಿದೆ ಎನ್ನುವ ಅವರ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
ಅದೇ ರೀತಿ, ಮಹಿಳಾ ವಕೀಲೆಯೊಬ್ಬರ ಜೊತೆ ಕೀಳು ಅಭಿರುಚಿಯಿಂದ ಮಾತನಾಡಿದ್ದ ವಿಡಿಯೋ ಕೂಡ ವ್ಯಾಪಕವಾಗಿ ಪ್ರಸರಣಗೊಂಡಿತ್ತು. ಇವುಗಳನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್‌ಗೆ ಸೂಚಿಸಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಿಗೇ ನ್ಯಾಯಮೂರ್ತಿ ವಿ ಶ್ರೀಷಾನಂದ ಅವರು ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಶನಿವಾರ ಮಧ್ಯಾಹ್ನ ಭೋಜನ ಬಳಿಕ ಕಲಾಪ ಆರಂಭವಾಗುತ್ತಿದ್ದಂತೆ ನ್ಯಾ. ಶ್ರೀಶಾನಂದ ಅವರು ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಹಿರಿಯ ವಕೀಲರ ಸಮ್ಮುಖದಲ್ಲಿ, “ಕಲಾಪದ ವೇಳೆ ನಾನು ವ್ಯಕ್ತಪಡಿಸಿರುವ ಅಭಿಪ್ರಾಯವು ಯಾವುದೇ ವ್ಯಕ್ತಿ ಸಮುದಾಯದ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶ ಹೊಂದಿರಲಿಲ್ಲ. ನನ್ನ ಹೇಳಿಕೆಯಿಂದ ಯಾವುದೇ ಸಮಾಜ ಅಥವಾ ವ್ಯಕ್ತಿಯ ಮನಸ್ಸಿಗೆ ಧಕ್ಕೆಯಾಗಿದ್ದರೆ ಅಂತರಾಳದಿಂದ ವಿಷಾದ ವ್ಯಕ್ತಪಡಿಸುತ್ತೇನೆ” ಎಂಬ ಒಕ್ಕಣೆಯನ್ನು ಓದಿರುವುದಾಗಿ ವರದಿ ಉಲ್ಲೇಖಿಸಿದೆ.
“ರಿಜಿಸ್ಟ್ರಾರ್ ಜನರಲ್ ಕಚೇರಿಯ ಸೂಚನೆಯ ಮೇರೆಗೆ ಮಧ್ಯಾಹ್ನ 2.30ರ ವೇಳೆಗೆ ವಕೀಲರ ಸಂಘದ ಪದಾಧಿಕಾರಿಗಳು ನ್ಯಾ. ಶ್ರೀಷಾನಂದ ಅವರ ಪೀಠದ ಮುಂದೆ ಹಾಜರಾಗಿದ್ದೆವು. ಮುದ್ರಿತ ಒಕ್ಕಣೆಯನ್ನು ನ್ಯಾಯಮೂರ್ತಿಗಳು ಓದಿದರು” ಎಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ತಿಳಿಸಿದ್ದಾರೆ.
“ನೀವು ಪ್ರಾಮಾಣಿಕರಾದ ನ್ಯಾಯಮೂರ್ತಿಗಳಾಗಿದ್ದೀರಿ. ಕಿರಿಯ ವಕೀಲರಿಗೆ ತಾವು ಉತ್ತೇಜನ ನೀಡಬೇಕು. ನಿಮ್ಮ ಪೀಠದ ಮುಂದೆ ಕಿರಿಯ ವಕೀಲರು ವಾದಿಸಲು ಹೆದರುವಂತಿರಬಾರದು. ಅನಗತ್ಯ ಮಾತುಗಳನ್ನು ಆಡಬಾರದು ಎಂದು ಸಲಹೆ ನೀಡಿದ್ದೇವೆ. ಇದಕ್ಕೆ ನ್ಯಾಯಮೂರ್ತಿಗಳೂ ಸಹಮತಿಸಿದ್ದಾರೆ” ಎಂದು ವಕೀಲರ ಸಂಘ ತಿಳಿಸಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಕೂಡ ನ್ಯಾ. ಶ್ರೀಷಾನಂದ ಅವರು ವಿಷಾದ ವ್ಯಕ್ತಪಡಿಸಿದ ವಿಚಾರವನ್ನು ಖಾತರಿಪಡಿಸಿದ್ದಾರೆ.
ಏನಿದು ಬೆಳವಣಿಗೆ?
ಬಾಡಿಗೆ ನಿಯಂತ್ರಣ ಕಾಯಿದೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ ಕಳೆದ ಆಗಸ್ಟ್ 28ರಂದು ನ್ಯಾ. ಶ್ರೀಷಾನಂದ ಅವರು, “ಮುಸ್ಲಿಂ ಬಾಹುಳ್ಯ ಪ್ರದೇಶವಾದ (ಬೆಂಗಳೂರಿನ) ಗೋರಿಪಾಳ್ಯದ ಕ್ರಿಮಿನಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹೆದರುತ್ತಿದ್ದಾರೆ. ಅದು ಪಾಕಿಸ್ತಾನದಲ್ಲಿದೆ.” ಎಂದು ಮುಕ್ತ ನ್ಯಾಯಾಲಯದಲ್ಲಿ ಹೇಳಿದ್ದರು.
ಆನಂತರ ಪ್ರತಿವಾದಿ ವಕೀಲರೊಬ್ಬರಿಗೆ ಪ್ರಶ್ನೆ ಕೇಳುತ್ತಿದ್ದಾಗ ಮಧ್ಯಪ್ರವೇಶಿಸಿದ ಮಹಿಳಾ ವಕೀಲರೊಬ್ಬರನ್ನು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದರು., “ಅವರ ಬಗ್ಗೆ (ಎದುರು ಪಕ್ಷ) ನಿಮಗೆ ಪೂರ್ತಿ ಗೊತ್ತಿದೆ. ನಾಳೆ ಬೆಳಗ್ಗೆ ಕೇಳಿದರೆ ಇನ್ನೇನಾದರೂ ಹೇಳುತ್ತೀರಿ. ಯಾವ ಬಣ್ಣದ ಒಳ ಉಡುಪು ಧರಿಸಿದ್ದಾರೆ ಎಂದೂ ಹೇಳುತ್ತೀರಿ” ಎಂದು ವಕೀಲೆಯನ್ನುದ್ದೇಶಿಸಿ ಲಘುವಾಗಿ ಮಾತನಾಡಿದ್ದರು. ಈ ಎರಡು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಇದರ ಬೆನ್ನಿಗೇ, ಶುಕ್ರವಾರ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಂದ ವರದಿ ಕೇಳಿತ್ತು.
ಇದನ್ನು ಓದಿದ್ದೀರಾ? ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೇಹ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಕೊಲೆಗಾರ
“ಕಲಾಪದ ಸಂದರ್ಭದಲ್ಲಿ ನ್ಯಾ. ನ್ಯಾಯಮೂರ್ತಿ ವಿ ಶ್ರೀಷಾನಂದ ಅವರು ನೀಡಿದ ಕೆಲ ಹೇಳಿಕೆಗಳ ಬಗ್ಗೆ ನಮ್ಮ ಗಮನ ಸೆಳೆಯಲಾಗಿದೆ. ಈ ವಿಚಾರದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ನಾವು ಎಜಿ ಮತ್ತು ಎಸ್‌ಜಿ ಅವರನ್ನು ಕೇಳಿಕೊಳ್ಳುತ್ತಿದ್ದೇವೆ. ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ತಿಳಿಸುತ್ತಿದ್ದೇವೆ. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಂದ ಆಡಳಿತಾತ್ಮಕ ನಿರ್ದೇಶನಗಳನ್ನು ಪಡೆದು 2 ವಾರಗಳಲ್ಲಿ ಈ ಪ್ರಕ್ರಿಯೆ ಕೈಗೊಳ್ಳಬಹುದು” ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು.
ಇಂತಹ ಘಟನೆಗಳು ಮರುಕಳಿಸದಿರುವ ನಿಟ್ಟಿನಲ್ಲಿ ತಾನು ಕೆಲ ಮೂಲಭೂತ ಮಾರ್ಗಸೂಚಿಗಳನ್ನು ರೂಪಿಸುವ ಸಾಧ್ಯತೆಗಳಿವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಈ ವ್ಯಕ್ತಿ ಪಂಜಾಬಿಗೆ ಹೊದರೆ ಖಲಿಸ್ತಾನವನು ಕಾಣಬಹುದು.
He is a good judge but all these some times happen due to slip of tongue unknowingly. Let us all not to make big issue. Let us forget about his comments