ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವಾಗಿ ತೀರ್ಪು ಪ್ರಕಟವಾಗಿದ್ದರೂ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ ಎನ್ನುತ್ತಿವೆ ಮೂಲಗಳು.
ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದನ್ನು ವಜಾಗೊಳಿಸಬೇಕು ಎಂದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪ್ರತಿಪಕ್ಷಗಳ ನಾಯಕರು ಆಗ್ರಹಿಸುತ್ತಿದ್ದಾರೆ.
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಂಪರ್ಕಿಸಿ ಸಿಎಂ ಅವರಿಗೆ ಬೆಂಬಲಕ್ಕೆ ನಿಲ್ಲುವ ಮಾತುಗಳನ್ನಾಡಿದ್ದಾರೆ ಎಂದು ತಿಳಿದುಬಂದಿದೆ.
“ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಡಿ. ಕಾನೂನು ಸಮರ ಮುಂದುವರಿಸಿ” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸುರ್ಜೇವಾಲಾ ಮತ್ತು ವೇಣುಗೋಪಾಲ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಹೈಕಮಾಂಡ್ ನಿಂತಿದ್ದು, ರಾಜೀನಾಮೆ ಬಗ್ಗೆ ಯೋಚಿಸಬೇಡಿ ಎಂಬ ಸಂದೇಶ ರವಾನಿಸಿದೆ.
ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಅಶೋಕ್, ವಿಜಯೇಂದ್ರ ಆಗ್ರಹ
ಸಿಎಂ ಸಿದ್ದರಾಮಯ್ಯ ಪರ ನಿಲ್ಲುವಂತೆ ಪಕ್ಷದ ಇತರೆ ಮುಖಂಡರಿಗೂ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ಬಗ್ಗೆ ಕಾನೂನಾತ್ಮಕ ಮತ್ತು ರಾಜಕೀಯವಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸುವ ಜೊತೆಗೆ ಉತ್ತಮ ಆಡಳಿತದತ್ತ ಗಮನಹರಿಸಿ ಎಂದು ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪ್ರಯತ್ನಿಸುತ್ತಿದ್ದು, ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಇದಕ್ಕಾಗಿ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ವಿಷಯದ ಬಗ್ಗೆ ರಾಜ್ಯದ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ನೀವು ಮುಂದುವರಿಯಿರಿ ಎಂದು ಹೈಕಮಾಂಡ್ ನಾಯಕರು ಮುಖ್ಯಮಂತ್ರಿಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ.