ಹುಬ್ಬಳ್ಳಿಯ ಸ್ಮಶಾನ ಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಸ್ಥಗಿತಗೊಳಿಸಿ, ಬೇರೆ ಕಡೆಗೆ ಸ್ಥಳಾಂತರಿಸಲು ಹುಬ್ಬಳ್ಳಿ ಧಾರವಾಡ ಆಯುಕ್ತ ಈಶ್ವರ ಉಳ್ಳಾಗಡ್ಡಿ ಆದೇಶ ಹೊರಡಿಸಿದ್ದಾರೆ.
ನಗರದ ಮಂಟೂರ್ ರಸ್ತೆಯಲ್ಲಿರುವ ಹರಿಶ್ಚಂದ್ರ ರುದ್ರಭೂಮಿ ಜಾಗೆಯಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ಶುರುವಾಗಿ ಮುಗಿಯುವ ಹಂತದಲ್ಲಿತ್ತು. ಆ ಸಮಯದಲ್ಲಿ ರುದ್ರಭೂಮಿ ಅಭಿವೃದ್ಧಿ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದೂಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಇಂದಿರಾ ಕ್ಯಾಂಟೀನ್ ತೆರವುಗೊಳಿಸುವಂತೆ ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತರು ಇಂದಿರಾ ಕ್ಯಾಂಟೀನ್ ಸ್ತಳಾಂತರ ಮಾಡುವಂತೆ ಪ್ರಕಟಣೆ ಹೊರಡಿಸಿದ್ದಾರೆ.
ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಡ ಹಾಗೂ ಕೂಲಿ ಕಾರ್ಮಿಕರಿಗೆ ಅತೀ ಕನಿಷ್ಠ ಬೆಲೆಗೆ ಊಟ ಹಾಗೂ ಉಪಹಾರವನ್ನು ನೀಡಲು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟಿನ್ ಅನ್ನು ಸ್ಥಾಪಿಸಲು ಯೋಜನೆಯನ್ನು ರೂಪಿಸಲಾಗಿದೆ. ಅದರಂತೆ ಹೊಸದಾಗಿ ಎರಡು ಇಂದಿರಾ ಕ್ಯಾಂಟಿನ್‌ಗಳನ್ನು ನಿರ್ಮಿಸಲು 2ನೇ ಜನೆವರಿ 2024ರಂದು ಸರ್ಕಾರದ ಅನುಮೋದನೆ ಪಡೆಯಲಾಗಿತ್ತು.
ಆ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಕಾಲನಿ, ಮಂಟೂರ ರಸ್ತೆ, ಹುಬ್ಬಳ್ಳಿಯಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟಿನ್‌ನ್ನು ಸ್ಥಳಾಂತರಿಸಲು ಒತ್ತಾಯಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಸೂಚನೆಯ ಮೇರೆಗೆ ಸ್ಮಶಾನ ಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿ ಸ್ಥಗಿತಗೊಳಿಸಿ, ಬೇರೆಕಡೆಗೆ ಸರ್ಕಾರಿ ಜಾಗೆ ಗುರುತಿಸಿ ಸ್ಥಳಾಂತರ ಮಾಡಲು ಸರ್ಕಾರದ ಅನುಮೋದನೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಇಂದಿರಾ ಕ್ಯಾಂಟೀನ್ ತೆರವುಗೊಳಿಸಲು ಆಗ್ರಹಿಸಿ ಪ್ರತಿಭಟಿಸಿದ್ದ ಸಂಘ ಸಂಸ್ಥೆ ಮತ್ತು ರುದ್ರಭೂಮಿ ಅಭಿವೃದ್ಧಿ ಸಮಿತಿ, ಪ್ರಕಟಣೆಯಲ್ಲಿ ಹಿಂದೂಪರ ಸಂಘಟನೆಗಳು, ಪಾಲಿಕೆ ಆಯುಕ್ತರಿಗೆ, ಪ್ರತಿಭಟನೆಯಲ್ಲಿ ಕೈಜೋಡಿಸಿದ ವಿವಿಧ ಸಂಘಟಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.