ಆರೋಗ್ಯದಲ್ಲಿ ದುಷ್ಪರಿಣಾಮ ಬೀರುವಂತಹ ಆಹಾರ ಪದಾರ್ಥಗಳ ಮೇಲೆ ನಿಯಂತ್ರಣವಿರಬೇಕು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪದ್ಧತಿ ಮತ್ತು ಜೀವನಶೈಲಿಯನ್ನು ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಪ್ಲಾಸ್ಟಿಕ್ ವಸ್ತುಗಳನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೆಚ್ಚಿನ ಜನರು ರಾಸಾಯನಿಕ ಬಳಸಿದ ಆಹಾರವನ್ನು ಸೇವಿಸುವುದರಿಂದ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ಆಹಾರವನ್ನು ಸೇವಿಸಬಾರದು ಎಂದರು.

ಹಣ್ಣು, ತರಕಾರಿ, ಸೊಪ್ಪು ಹಾಗೂ ಸಿರಿಧಾನ್ಯಗಳಲ್ಲಿ ಹೆಚ್ಚಿನ ಪೌಷ್ಟಿಕಾಂಶವಿದ್ದು, ಸಿರಿಧಾನ್ಯಗಳಿಂದ ತಯಾರಿಸಿದ ಆಹಾರವನ್ನು ಸೇವಿಸುವುದರಿಂದ ಮನುಷ್ಯನ ಆರೋಗ್ಯ ಉತ್ತಮವಾಗಿ ವೃದ್ಧಿಸುತ್ತದೆ. ತಾಯಿಯು ಮಕ್ಕಳಿಗೆ ಉತ್ತಮ ಆಹಾರದ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಕೆ. ಎನ್.ತನುಜಾ ಮಾತನಾಡಿ, ಪೌಷ್ಟಿಕಾಂಶ ಭರಿತ ಆಹಾರ ಪದಾರ್ಥಗಳನ್ನು ಸೇವಿಸಬೇಕು. ಮಕ್ಕಳಿಗೆ ಉತ್ತಮವಾದ ಪೌಷ್ಟಿಕ ಆಹಾರವನ್ನು ಪ್ರತಿದಿನ ನೀಡಬೇಕು ಎಂದರು.
ಮಗುವಿನ ಅಪೌಷ್ಟಿಕತೆಗೆ ಕಾರಣವೆಂದರೆ ಕಡಿಮೆ ತೂಕದ ಮಕ್ಕಳ ಜನನ. ಹೀಗಾಗಿ ಗರ್ಭಿಣಿಯರು ಉತ್ತಮವಾದ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಮಹಿಳೆಯರು ಉತ್ತಮವಾದ ಆಹಾರ ಪದಾರ್ಥಗಳನ್ನು ಸೇವಿಸಿದರೆ ಯಾವುದೇ ರೀತಿಯ ಆರೋಗ್ಯ ತೊಂದರೆ ಮಕ್ಕಳಲ್ಲಿ ಕಂಡು ಬರುವುದಿಲ್ಲ. ಪ್ರತಿ ಮಗುವಿಗೆ ಅವಧಿಗೆ ಅನುಗುಣವಾಗಿ ಲಸಿಕೆಯನ್ನು ಹಾಕಿಸಬೇಕು ಎಂದರು.
ಇದನ್ನೂ ಓದಿರಿ ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ ಇಂದಿರಾ ಕ್ಯಾಂಟೀನ್: ಸ್ಥಳಾಂತರಕ್ಕೆ ಪಾಲಿಕೆ ಆಯುಕ್ತರ ಆದೇಶ
ಸುಜಾತಾ ಕೆ. ಮುರಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಾ.ಕಮಲಾ ಬೈಲೂರು, ಕುಂದಗೋಳ ತಾಲೂಕಿನ ಶಿಶು ಅಭಿವೃದ್ದಿ ಯೋಜನೆಯ ಅಧಿಕಾರಿ ಶಾರದಾ ನಾಡಗೌಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಚ್.ಎಚ್.ಕುಕನೂರ, ನವಲಗುಂದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಲಲಿತಾ. ಎನ್. ಹಾವೇರಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಶಾಂತ ದೇವರಮನಿ, ಮುತ್ತಣ್ಣ ಸಿ.ಎ. ಹಾಗೂ ಡಾ. ಉಮಾ ಬಳ್ಳೊಳ್ಳಿ, ಡಾ. ರಾಜೇಶ್ವರಿ, ಅಂಗನವಾಡಿ ಮೇಲ್ವಿಚಾರಕಿಯರು, ಆಶಾ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.