ಒಳಮೀಸಲಾತಿ ಜಾರಿ ಮಾಡುವುದರಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಖಂಡಿಸಿ ಅಕ್ಟೋಬರ್ 3ರಂದು ರಾಯಚೂರು ಜಿಲ್ಲಾ ಬಂದ್ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ ಮುಖಂಡ ಅಂಬಣ್ಣ ಅರೋಲಿಕರ್ ತಿಳಿಸಿದರು.
ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಮೀನಮೇಷ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ. ಒಳಮೀಸಲಾತಿ ಜಾರಿಗಾಗಿ ಸುಮಾರು 40 ವರ್ಷಗಳಿಂದ ನಿರಂತರವಾಗಿ ಕಾನೂನು ಹಾಗೂ ಬೀದಿ ಹೋರಾಟ ಮಾಡಿದ್ದೇವೆ. ಒಳಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ತೀರ್ಪು ನೀಡಿದರೂ, ರಾಜ್ಯದ ಕಾಂಗ್ರೆಸ್ ಸರ್ಕಾರವು ಎರಡು ತಿಂಗಳಿನಿಂದ ಯಾವುದೇ ರೀತಿಯ ಕ್ರಮ ವಹಿಸದೇ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು.

ಈಗಾಗಲೇ ಮಸ್ಕಿಯಲ್ಲಿ ಬೃಹತ್ ಹೋರಾಟವನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟಗಳನ್ನು ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು. ಬರುವ ಅಕ್ಟೋಬರ್ 2ರೊಳಗೆ ಬೇಡಿಕೆ ಈಡೇರಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಅ.3ರಂದು ರಾಯಚೂರು ಜಿಲ್ಲೆಯ ಎಲ್ಲ ಏಳು ತಾಲ್ಲೂಕುಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಾದ್ಯಂತ ಹೋರಾಟ ವಿಸ್ತರಿಸಲಾಗುವುದು ಎಂದು ಎಚ್ಚರಿಸಿದರು.
ಇದನ್ನು ಓದಿದ್ದೀರಾ? ಶಿವಮೊಗ್ಗ | ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ
ಸಮಿತಿ ಮುಖಂಡರಾದ ಬಾಲಸ್ವಾಮಿ ಕೊಡ್ಲಿ, ಎಂ.ವಿರೂಪಾಕ್ಷಿ, ಪಿ.ಯಲ್ಲಪ್ಪ, ಕೆ.ಪಿ.ಅನಿಲ ಕುಮಾರ, ಶಂಕ್ರಪ್ಪ ಹೊಸಮನಿ, ಜೆ.ಬಿ.ರಾಜು, ವಿಕ್ರಮ, ವೀರೇಶ ಉಪಸ್ಥಿತರಿದ್ದರು.
