“ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡುತ್ತಾರಾ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದರು.
ಸಿಎಂ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಮೊದಲು ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜೀನಾಮೆ ನೀಡಲಿ” ಎಂದು ಹೇಳಿದರು.
ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ
ಇನ್ನು ಇದೇ ಸಂದರ್ಭದಲ್ಲಿ, “ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾದ ಕಾರಣ ತಮಿಳುನಾಡಿಗೆ ಈಗಾಗಲೇ 202 ಟಿ.ಎಂ.ಸಿ ನೀರು ಬಿಡಲಾಗಿದೆ. ಕರ್ನಾಟಕ ನಿಯಮಾನುಸಾರ ಬಿಡುವ ಪ್ರಮಾಣಕ್ಕಿಂತಲೂ ಹೆಚ್ಚಿನ ಪ್ರಮಾಣವನ್ನು ತಮಿಳುನಾಡಿಗೆ ಹರಿಸಿದೆ” ಎಂದರು.
ಚುನಾವಣಾ ಬಾಂಡ್‌ಗಳ ಮೂಲಕ ಬೆದರಿಸಿ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ಯ ಆದರ್ಶ ಅಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ಈ ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯವು, ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಅಪರಾಧಕ್ಕಾಗಿ ಎಫ್‌ಐಆರ್ ದಾಖಲಿಸಲು ತಿಲಕ್ ನಗರ ಪೊಲೀಸ್ ಠಾಣೆಗೆ ಆದೇಶಿಸಿದೆ.
