ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 13ರಂದು ನಡೆಯಲಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣೆಯಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು ಆ ದಿನ ಮತ ಎಣಿಕೆ ಕೇಂದ್ರದ 200 ಮೀಟರ್ ಸುತ್ತಮುತ್ತ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಆದೇಶಿಸಿದ್ದಾರೆ.
“ವಿಜಯೋತ್ಸವದ ಸಲುವಾಗಿ ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮೆರವಣಿಗೆ ಮಾಡುತ್ತಾರೆ. ಇದು ಪರಾಭವಗೊಂಡ ಅಭ್ಯರ್ಥಿ ಬೆಂಬಲಿಗರಿಗೆ ಹಾಗೂ ವಿಜೇತ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಘರ್ಷಣೆಗೆ ಕಾರಣವಾಗಬಹುದು. ಹೀಗಾಗಿ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 13ರಂದು ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆಯವರೆಗೆ ಮುಂಜಾಗ್ರತಾ ಕ್ರಮವಾಗಿ ನಗರದ ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಘೋಷಿಸಲಾಗಿದೆ” ಎಂದು ಜಿಲ್ಲಾ ಚುನಾವಣಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
“ನಿಷೇಧಿತ ಪ್ರದೇಶ ಹಾಗೂ ಅವಧಿಯಲ್ಲಿ ಯಾವುದೇ ಬಹಿರಂಗ ಸಭೆ, ಸಮಾರಂಭ, ಜಾತ್ರೆ ಮೆರವಣಿಗೆ ಇತ್ಯಾದಿಗಳನ್ನು ಮಾಡುವುದು, 5 ಜನರಿಗಿಂತ ಹೆಚ್ಚು ಜನರು ಗುಂಪು ಸೇರುವುದು, ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದಕ್ಕೆ ಅವಕಾಶ ಇರುವುದಿಲ್ಲ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿ ನೆಮ್ಮದಿ ಬೇಕು ಎಂದರೆ ಬಿಜೆಪಿ ವಿರುದ್ಧ ಹೋರಾಡಲೇಬೇಕು: ಮಲ್ಲಿಕಾರ್ಜುನ ಖರ್ಗೆ
“ನಿಷೇಧಿತ ಅವಧಿಯಲ್ಲಿ ವಾಹನಗಳಿಗೆ ಧ್ವನಿವರ್ದಕ ಅಳವಡಿಸಲು ಅವಕಾಶ ಇರುವುದಿಲ್ಲ. ಪಟಾಕಿ ಸಿಡಿಸುವಂತಿಲ್ಲ. ಮತ ಎಣಿಕೆ ದಿನದಂದು ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಧ್ವನಿವರ್ದಕ, ಮೆಗಾಫೋನ್ ಮುಂತಾದುವುಗಳನ್ನು ಬಳಸಿ ಘೋಷಣೆ ಕೂಗುವುದು, ಭಾಷಣ ಮಾಡುವುದು ಮತ್ತು ಅನುಚಿತವಾಗಿ ವರ್ತಿಸುವುದನ್ನು ನಿರ್ಬಂಧಿಸಲಾಗಿದೆ” ಎಂದು ಜಿಲ್ಲಾ ಚುನಾವಣಾಧಿಕಾರಿ ಆದೇಶಿಸಿದ್ದಾರೆ.
“ನಿಷೇದಾಜ್ಞೆಯು ಖಾಸಗಿ ಕಾರ್ಯಕ್ರಮಗಳಾಗಿರುವ ಮದುವೆ, ಗೃಹಪ್ರವೇಶ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ. ಉಳಿದಂತೆ ನಿಷೇದಾಜ್ಞೆ ಉಲ್ಲಂಘಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.