ಬೆಂಗಳೂರು ನಗರದ ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆ ಮತ್ತು ಇತರ ಮೂವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನಿ ಪ್ರಜೆ, ಬಾಂಗ್ಲಾದೇಶಿ ಪ್ರಜೆ ಮತ್ತು ಇಬ್ಬರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ.
ಪಾಕಿಸ್ತಾನಿ ಪ್ರಜೆಯು ಬಾಂಗ್ಲಾದೇಶಿ ಪ್ರಜೆಯಾದ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಜಿಗಣಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಸ್ಥಳೀಯ ಪೊಲೀಸರು ಭಾನುವಾರ ರಾತ್ರಿ ಅವರ ನಿವಾಸದ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಉಲ್ಫಾ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದ ನಂತರ ಗುಪ್ತಚರ ದಳದ ಅಧಿಕಾರಿಗಳು ಪಾಕಿಸ್ತಾನಿ ಬೆಂಗಳೂರಿನಲ್ಲಿ ನೆಲೆಸಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು.
ಇದನ್ನು ಓದಿದ್ದೀರಾ? ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ, ಕೋಟ ಶ್ರೀನಿವಾಸ ಪೂಜಾರಿಗೆ ಕೋಟಿ ಕೋಟಿ ಲಂಚ: ಗೂಳಿಹಟ್ಟಿ ಶೇಖರ್ ಗಂಭೀರ ಆರೋಪ
ಧಾರ್ಮಿಕ ವಿಷಯಗಳ ವಿವಾದದ ಕಾರಣ ಪಾಕಿಸ್ತಾನದ ಪ್ರಜೆ ತನ್ನ ದೇಶವನ್ನು ತೊರೆದು ಬಾಂಗ್ಲಾದೇಶಕ್ಕೆ ಹೋಗಿದ್ದನು. ಬಳಿಕ ಬಾಂಗ್ಲಾದ ಢಾಕಾದಲ್ಲಿ ಮಹಿಳೆಯನ್ನು ವಿವಾಹವಾಗಿದ್ದು, ಆತ 2014ರಲ್ಲಿ ಆಕೆಯೊಂದಿಗೆ ಭಾರತಕ್ಕೆ ಬಂದಿದ್ದ ಎನ್ನಲಾಗಿದೆ.
ಆರಂಭದಲ್ಲಿ ದೆಹಲಿಯಲ್ಲಿ ನೆಲೆಸಿ ಅಲ್ಲಿ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಡ್ರೈವಿಂಗ್ ಲೈಸೆನ್ಸ್ ಪಡೆದುಕೊಂಡಿದ್ದಾನೆ. ಬಳಿಕ 2016ರಲ್ಲಿ ಕುಟುಂಬ ಸಮೇತ ಬೆಂಗಳೂರಿಗೆ ಬಂದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
