ಬೆಂಗಳೂರು-ಮೈಸೂರು ಹೆದ್ದಾರಿಯ ಉಮ್ಮಡಹಳ್ಳಿ ಗೇಟ್ ಬಳಿಯ ಸ್ಯಾಂಜೋ ಆಸ್ಪತ್ರೆ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, 20ಕ್ಕೂ ಅಧಿಕ ಮಂದಿ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಕರ್ನಾಟಕ ರಸ್ತೆ ಸಾರಿಗೆ ಬಸ್ ಸರಾಸರಿ ವೇಗದಲ್ಲಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಏಕಾಏಕಿ ಸರ್ವೀಸ್ ರಸ್ತೆಯಲ್ಲಿದ್ದ ಕ್ಯಾಂಟರ್‌ಗೆ ಢಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇವರಲ್ಲಿ ಐದರಿಂದ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೇ ಬಸ್‌ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ಹತ್ತಿರದ ಸ್ಯಾಂಜೋ ಆಸ್ಪತ್ರೆಗೆ ದಾಖಲಿಸಿದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತಕ್ಕೆ ಒಳಗಾದ ಬಸ್ ಕುಣಿಗಲ್-ಹೆಬ್ಬರು-ತುಮಕೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ ಮಂಡ್ಯ ನಗರಕ್ಕೆ ತಲುಪಲು ಸರ್ವಿಸ್ ರಸ್ತೆಗೆ ಮುಟ್ಟಿದಾಗ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿದೆ. ಬಸ್ ಗಂಭೀರವಾಗಿ ಹಾನಿಯಾಗಿದೆ ಹಾಗೂ ಕ್ಯಾಂಟರ್ ಕೂಡಾ ಅಪಾಯಕ್ಕೊಳಗಾಗಿದೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಅಶೋಕಪುರಂ ಬಡಾವಣೆ ಅಭಿವೃದ್ಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಉರುಳಿ ಬಿದ್ದಿದ್ದ ಬಸ್ಸನ್ನು ಕ್ರೇನ್ ಸಹಾಯದಿಂದ ತೆರವು ಮಾಡಿ ಪುನಃ ರಸ್ತೆ ಸಂಚಾರವನ್ನು ಆರಂಭಿಸಿದರು. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತಾಗಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಅಪಘಾತದ ಹಿನ್ನೆಲೆಯಲ್ಲಿ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.