ಮುಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನು ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ಎಕ್ಸ್ ತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, “ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.
“ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ” ಎಂದಿದ್ದಾರೆ.
“ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ ದೊಡ್ದ ಮನಸ್ಸು ಮಾಡಿರುವುದು ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ, ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ; ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ” ಎಂದು ಹೇಳಿದ್ದಾರೆ.
ಕೆಟ್ಟ ಮೇಲೆ ಬುದ್ಧಿ ಬಂತು: ವಿಜಯೇಂದ್ರ
ರಾಜೀನಾಮೆಯೊಂದೇ ನಿಮಗೆ ಉಳಿದಿರುವ ದಾರಿ. ‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ. ‘ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ’ ಎಂದು ಅಂದು ಆರ್ಭಟಿಸಿದ್ದ ಸಿದ್ದರಾಮಯ್ಯ ಅವರು ಬೇಷರತ್ತಾಗಿ ಅವರ ಪತ್ನಿಯವರಿಂದ ನಿವೇಶನ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ. ನೀವೇಶನಗಳನ್ನು ಹಿಂದಿರುಗಿಸಿ ತಪ್ಪೊಪ್ಪಿಕೊಂಡಂತೆ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದರೆ ಮರೆತು ಹೋಗಿರುವ ತಮ್ಮ ನೈತಿಕತೆ ಪ್ರಜ್ಞೆ ಪ್ರದರ್ಶಿಸಿದಂತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
“ಬಿಜೆಪಿ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದರು, ನಿಮಗೆ ದೊರೆತ 14 ಅಕ್ರಮ ನಿವೇಶನಗಳು 5000 ಸಾವಿರಕ್ಕೂ ಹೆಚ್ಚು ನಿವೇಶನಗಳ ಲೂಟಿಕೋರತನಕ್ಕೆ ರಕ್ಷಣೆಯಾಗಿ ನಿಂತಿದೆ ಎಂದು ಆರೋಪಿಸಿ ನಾವು ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಗೆ ಪರ್ಯಾಯ ಸಮಾವೇಶ ಆಯೋಜಿಸಿ ಭಂಡತನದ ಸಮರ್ಥನೆಗಿಳಿದರು, ಸಾಮಾಜಿಕ ಕಾರ್ಯಕರ್ತರ ನ್ಯಾಯಾಲಯದ ಹೋರಾಟಕ್ಕೆ ಅಸ್ತು ಎಂದ ಘನತೆವೆತ್ತ ರಾಜ್ಯಪಾಲರನ್ನು ಅವಹೇಳನ ಮಾಡಿದರು, ಅವರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಹೋರಾಟ ಮಾಡಿದರು, ನ್ಯಾಯಾಲಯದಲ್ಲಿ ಜಯ ದೊರಕದ ಹಿನ್ನಲೆಯಲ್ಲಿ ಕಾನೂನಿನ ಕುಣಿಕೆ ಬಿಗಿತ ಹೆಚ್ಚಾದಂತೆ, CBI-ED ತನಿಖೆಗಳ ನಿರೀಕ್ಷೆಯಿಂದ ಬೆದರಿದ ಮುಖ್ಯಮಂತ್ರಿಗಳು ಏಕಾಏಕಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿರುವುದು ಅವರು ಕಾನೂನು ಹೋರಾಟಕ್ಕೆ ಮುನ್ನವೇ ಶಸ್ತ್ರ ತ್ಯಜಿಸಿ ಶರಣಾಗತಿ ಪ್ರಕಟಿಸಿದಂತಾಗಿದೆ” ಎಂದು ಎಕ್ಸ್ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಪ್ರತಾಪ್ ಸಿಂಹ
“ಪ್ರಕರಣ ಬೆಳಕಿಗೆ ಬಂದ ಕೂಡಲೇ ನಿವೇಶನ ವಾಪಸ್ ನೀಡಿ, ಮುಕ್ತ ತನಿಖೆ ಎದುರಿಸುವಂತೆ ಸಲಹೆ ನೀಡಿದ್ದೆ. ಈಗ ಇ.ಡಿ. ಪ್ರಕರಣ ದಾಖಲಾದ ನಂತರ ವಾಪಸ್ ನೀಡಿದ್ದಾರೆ. ಆಗಲೇ ನೀಡಿದ್ದರೆ ಕುರ್ಚಿ ಕಳೆದುಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ. ಈಗ ಕೊಟ್ಟರೂ ಪ್ರಯೋಜನ ಇಲ್ಲ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು” ಎಂದು ಮಂಗಳವಾರ ಮೈಸೂರಿನಲ್ಲಿ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.