ವಿಧಾನ ಪರಿಷತ್ ಸದಸ್ಯರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಿದ್ದರಿಂದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾದೇವ ಮುಂಗಳ್ಳೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ 23ರಂದು ಹುಮನಾಬಾದ್ ಮತಕ್ಷೇತ್ರದ ಶಾಸಕರ ಕಚೇರಿಯಲ್ಲಿ ಅಂಗವಿಕಲರಿಗೆ ವಿವಿಧ ಸಲಕರಣೆಗಳ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಸರ್ಕಾರದ ಶಿಷ್ಟಾಚಾರ ಉಲ್ಲಂಘಿಸಿರುವುದಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಭೀಮರಾವ್ ಬಿ. ಪಾಟೀಲ ದೂರು ನೀಡಿದ್ದರು.
ಸದಸ್ಯರ ದೂರು ಹಾಗೂ ಸರ್ಕಾರದ ಸಭೆ, ಸಮಾರಂಭಗಳಲ್ಲಿ ಶಿಷ್ಟಾಚಾರದ ಸೂಚನೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಅನೇಕ ಸಭೆಗಳಲ್ಲಿ ಸೂಚನೆಗಳನ್ನು ನೀಡಿದ್ದರೂ, ಶಿಷ್ಟಾಚಾರ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿ ಕಂಡು ಬಂದ ಹಿನ್ನಲೆ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಆದೇಶದಲ್ಲಿ ತಿಳಿಸಿದ್ದಾರೆ.