ಕಿತ್ತೂರು ಉತ್ಸವದಲ್ಲಿ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ್ ತಿಳಿಸಿದರು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಕಿತ್ತೂರಿನ ರಾಣಿ ಚೆನ್ನಮ್ಮಳ 200ನೇ ವಿಜಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಯಶಸ್ವಿಗೊಳಿಸಲು ಸಮಿತಿಗಳ ಸದಸ್ಯರು ಮತ್ತು ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.
ಮೂರು ದಿನಗಳ ಕಾಲ ಜರುಗಲಿರುವ ಉತ್ಸವದ ದಿನಗಳಂದು ಆಗಮಿಸುವ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೆ ಕೊರತೆ ಆಗಬಾರದು. ಉತ್ಸವದ ಮೊದಲನೇ ದಿನ ಜರುಗಲಿರುವ ಮೆರವಣಿಗೆಯಲ್ಲಿ ಸಾಗುವ ಕಲಾವಿದರು, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಗಳ ದಿನದಂದು ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಲ್ಲಿ ಯಾವುದೇ ಗೊಂದಲಗಳು ಆಗಬಾರದು. ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಕಿತ್ತೂರು ಉತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ರಚಿಸಲಾದ ವಿವಿಧ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಗಣ್ಯವ್ಯಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಆಗಮಿಸುವ ಕಲಾತಂಡಗಳಿಗೆ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಳಗಾವಿ | ನಷ್ಟದ ಆತಂಕ ಎದುರಿಸುತ್ತಿರುವ ಸೋಯಾಬೀನ್ ಬೆಳೆದ ಬೆಳೆಗಾರರು!
ಪೋಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗಳೇದ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಜಂಟಿ ನಿರ್ದೇಶಕ ಪ್ರವಾಸೋದ್ಯಮ ಇಲಾಖೆ ಹಾಗೂ ಇತರೆ ಉಪ ಸಮಿತಿ ಅಧ್ಯಕ್ಷರು ಸಭೆಯಲ್ಲಿ ಉಪಸ್ಥಿತರಿದ್ದರು.