ಮಹಾಲಿಂಗಪುರ ಪಟ್ಟಣದ ಅಂಗನವಾಡಿ ಕೇಂದ್ರಗಳಿಂದ ಆಹಾರ ಸಾಮಗ್ರಿಗಳ ವಿತರಣೆಯಲ್ಲಿ ತಾರತಮ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಆರೋಪ ದೃಢವಾದರೆ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗುವುದು ಎಂದು ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಎಚ್ಚರಿಕೆ ನೀಡಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಾಪುರ ಪಟ್ಟಣದ ಪುರಸಭೆ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಆ ಭಾಗದಲ್ಲಿ ಪುರಸಭೆಯ ಜಾಗಗಳನ್ನು ಪರಿಶೀಲಿಸಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಸಿಡಿಪಿಒ ಗಮನಕ್ಕೆ ತರಲಾಗುವುದು. ಪುರಸಭೆಯಿಂದ ಅಗತ್ಯ ಸೌಲಭ್ಯಗಳನ್ನು ಕೇಂದ್ರಗಳಿಗೆ ಒದಗಿಸಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಕಾಂತರಾಜ ಆಯೋಗ ವರದಿ ಜಾರಿಗೆ ಒತ್ತಾಯ
“ಕೆಲ ಅಂಗನವಾಡಿ ಕೇಂದ್ರಗಳಲ್ಲಿ ನೀರು, ವಿದ್ಯುತ್ ಸಂಪರ್ಕ ಇಲ್ಲ. ಕೆಲ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಇಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇನ್ನು ಕೆಲವು ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡು ಬೀಳುವ ಹಂತ ತಲುಪಿವೆ” ಎಂದು ಅಂಗನವಾಡಿ ಕಾರ್ಯಕರ್ತೆಯರು ಅಳಲು ತೋಡಿಕೊಂಡರು.
ಪುರಸಭೆ ಸಮುದಾಯ ಸಂಘಟನಾಧಿಕಾರಿ ಸಿ ಎಸ್ ಮಠಪತಿ ಮಾತನಾಡಿದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರಜಾಕ ಬಾಗವಾನ, ಮುಖ್ಯಾಧಿಕಾರಿ ಈರಣ್ಣ ದಡ್ಡಿ ಇದ್ದರು.