ಇಳಿ ವಯಸ್ಸಿನಲ್ಲಿ ತಂದೆ-ತಾಯಿಯನ್ನು ನೋಡಿಕೊಳ್ಳಬೇಕಾದ ಮಕ್ಕಳೇ ತಮಗೆ ಕಿರುಕುಳ ನೀಡಿದ್ದು, ಬೇಸತ್ತ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನಲ್ಲಿ ನಡೆದಿದೆ. ನೀರಿನ ಟ್ಯಾಂಕ್‌ಗೆ ಬಿದ್ದು ದಂಪತಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
ಮೃತ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಅವರ ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಅವರು ನಾಗೌರ್‌ನ ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎರಡು ದಿನಗಳಿಂದ ಮನೆಯ ಬಾಗಿಲು ತೆಗೆದಿರಲಿಲ್ಲ. ದಂಪತಿಗಳೂ ಕಾಣಿಸಿರಲಿಲ್ಲ. ಅನುಮಾನಗೊಂಡ ನೆರೆಹೊರೆಯವರು ವೃದ್ಧ ದಂಪತಿಯ ಮಗನಿಗೆ ಕರೆ ಮಾಡಿದ್ದಾರೆ. ಆತ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಹುಡುಕಾಟ ನಡೆಸಿದ್ದಾರೆ ಈ ವೇಳೆ, ಮನೆಯ ನೀರಿನ ಟ್ಯಾಂಕ್‌ನಲ್ಲಿ ದಂಪತಿಗಳ ಮೃತದೇಹಗಳು ಪತ್ತೆಯಾಗಿವೆ.
ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಅದರಲ್ಲಿ, “ಆಸ್ತಿ ವಿಚಾರವಾಗಿ ತಮ್ಮ ಇಬ್ಬರು ಗಂಡು ಮಕ್ಕಳು ಮತ್ತು ಸೊಸೆಯಂದಿರುವ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ” ಎಂದು ದಂಪತಿಗಳು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.