ಕಳೆದೊಂದು ವಾರದಿಂದ ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಹಲವಾರು ಜಿಲ್ಲೆಗಳಲ್ಲಿ ಕೆರೆ, ಕಟ್ಟೆ, ತೊರೆ, ಹಳ್ಳಗಳು ತುಂಬಿ ಹರಿಯುತ್ತಿವೆ. ಶನಿವಾರವೂ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಅಬ್ಬರಿಸಲಿದ್ದು, 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಮೂರು ಚೆಕ್ ಡ್ಯಾಂಗಳು ಕೊಚ್ಚಿಹೋಗಿವೆ. ಧಾರವಾಡ ಜಿಲ್ಲೆಯಲ್ಲಿ ಹಲವು ಗ್ರಾಮಗಳ ಕೃಷಿ ಭೂಮಿ ಜಲಾವೃತವಾಗಿವೆ. ಬೆಳೆ ನಾಶವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿಯೂ ಭಾರೀ ಮಳೆ ಸುರಿದಿದ್ದು, ಹಳ್ಳಗಳು ತುಂಬಿಹರಿಯುತ್ತಿವೆ. ಇನ್ನೂ, ಹಲವು ಜಿಲ್ಲೆಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ.
ಆದಾಗ್ಯೂ, ಕೆರೆ-ಕಟ್ಟೆಗಳು ತುಂಬಿರುವುದರಿಂದ ಹಲವಾರು ಗ್ರಾಮಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಗಳೂ ಗರಿಗೆದರಿವೆ.
ಶನಿವಾರವೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾವೇರಿ, ದಾವಣಗೆರೆ, ಚಿತ್ರದುರ್ಗ ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.