ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ನಂತರ ಬಂಗಳಾದ ಕಿರಿಯ ವೈದ್ಯರು ಸರ್ಕಾರದ ಎದುರು ಪ್ರಮುಖ ಐದು ಬೇಡಿಕೆಗಳನ್ನಿಟ್ಟಿದ್ದಾರೆ. ಅವುಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ, ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಉಪವಾಸ ಸತ್ಯಾಗ್ರಹ ಭಾನುವಾರ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಅವರ ಪ್ರತಿಭಟನೆಯನ್ನು ಬೆಂಬಲಿಸಿ ರಾಜ್ಯಾದ್ಯಂತ ಜನರು ‘ಸಾಂಕೇತಿಕ ಉಪವಾಸ’ ನಡೆಸಿದ್ದಾರೆ.
ಬಂಗಾಳದ ಕೋಲ್ಕತ್ತಾ ಮತ್ತು ಸಿಲಿಗುರಿ ನಗರದಲ್ಲಿ 9 ದಿನಗಳಿಂದ ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರಲ್ಲಿ, ಈವರೆಗೆ ಮೂವರು ಅಸ್ವಸ್ಥಗೊಂಡಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರೈನಿ ವೈದ್ಯರನ್ನು ಬೆಂಬಲಿಸಿ ಮಾಲ್ಡಾ ಮತ್ತು ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ಹಲವಾರು ಜನರು 12 ಗಂಟೆಗಳ ‘ಸಾಂಕೇತಿಕ ಉಪವಾಸ’ ನಡೆಸಿದ್ದಾರೆ. ಟ್ರೈನಿ ವೈದ್ಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಅತ್ಯಾಚಾರ-ಹತ್ಯೆಗೆ ಬಲಿಯಾದ ಆರ್‌ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿ ಎನ್.ಎಸ್ ನಿಗಮ್ ಅವರನ್ನು ಕೂಡಲೇ ವಜಾಗೊಳಿಸಬೇಕು. ಕೆಲಸದ ಸ್ಥಳಗಳಲ್ಲಿ ಭದ್ರತೆ ಒದಗಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಕೇಂದ್ರೀಕೃತ ರೆಫರಲ್ ವ್ಯವಸ್ಥೆಯನ್ನು ಸ್ಥಾಪಿಸಬೇಕು ಎಂಬುದು ಸೇರಿದಂತೆ ಹಲವು ಕ್ರಮಗಳಿಗೆ ಪ್ರತಿಭಟನಾನಿರತ ವೈದ್ಯರು ಒತ್ತಾಯಿಸಿದ್ದಾರೆ.