ರಾಜ್ಯದಲ್ಲಿ ಹಿಂದೂಗಳ ವಿರೋಧಿ ಸರ್ಕಾರ ಇದೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಜಯೇಂದ್ರ, “ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ, ದಾಳಿ ಮಾಡಿದ್ದ, ಗಲಭೆ ಸೃಷ್ಟಿಸಿದ್ದ ದೇಶದ್ರೋಹಿಗಳ ಮೇಲಿನ ಕೇಸುಗಳನ್ನು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಹಿಂದಕ್ಕೆ ಪಡೆದಿದೆ. ಹುಬ್ಬಳ್ಳಿ ಘಟನೆ ವಿಷಯದಲ್ಲಿ ಎನ್‍ಐಎ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ, ಹೀಗಾಗಿ ಯಾವ ಮಟ್ಟಕ್ಕೆ ಹೋಗಲು ಕೂಡ ಕಾಂಗ್ರೆಸ್ ಸರ್ಕಾರ ಹೇಸುವುದಿಲ್ಲ” ಎಂದರು.
“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ. ಸಿದ್ದರಾಮಯ್ಯನವರು ವಿಜಯೇಂದ್ರ ಭವಿಷ್ಯ ಹೇಳುತ್ತಾರಾ? ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿ ಎಂದು ಅವರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಂದ ಹೇಳಿಸಲಿ ನೋಡೋಣ” ಎಂದು ವಿಜಯೇಂದ್ರರು ಸವಾಲು ಹಾಕಿದರು.
“ನಮ್ಮ ಪಕ್ಷದ ಹೋರಾಟದ ಬಳಿಕ ಮುಡಾ ಹಗರಣದಲ್ಲಿ ಕದ್ದ ಮಾಲನ್ನು ವಾಪಸ್ ಕೊಡಲು ಸಿದ್ದರಾಮಯ್ಯನವರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ. ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಸೂರ್ಯ ಚಂದ್ರರು ಇರುವಷ್ಟೇ ಸತ್ಯ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!
“ಕರ್ನಾಟಕದಲ್ಲಿ ಈಗ ಬಿಗ್ ಬಾಸ್ ಸೀರಿಯಲ್ ನಡೆಯುತ್ತಿದೆ. ಕಾಂಗ್ರೆಸ್ ಸರಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್. ಅವರ ಸೂಚನೆಯಂತೆ ಸರಕಾರ ನಡೆದುಕೊಳ್ಳುತ್ತಿದೆ” ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
“ಮುಖ್ಯಮಂತ್ರಿಗಳು ಮನುವಾದ ಪಾಲಿಸುವವರು. ಹಿಂದೂಗಳು ತಾವು ಹಿಂದೂ ಎಂದ ತಕ್ಷಣ ನಿಮಗ್ಯಾಕೆ ಬೆಂಕಿ ಬೀಳುತ್ತದೆ? ಇದಕ್ಕೆ ಉತ್ತರ ಕೊಡಲು ನಿಮಗೆ ಸಾಧ್ಯವೇ? ಅಮಾಯಕ ಪೊಲೀಸರ ಮೇಲೆ ಕಲ್ಲು ತೂರಿ ಗಾಯ ಮಾಡಿ ಆಸ್ಪತ್ರೆಗೆ ಕಳಿಸಿದವರ ಕೇಸು ಹಿಂದಕ್ಕೆ ಪಡೆಯುತ್ತಿದ್ದೀರಿ. ಅವರು ದೇಶಪ್ರೇಮಿಗಳೇ” ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.
“ಹುಬ್ಬಳ್ಳಿಯಲ್ಲಿ ದೇಶದ್ರೋಹಿಗಳ ಕೇಸನ್ನು ವಾಪಸ್ ಪಡೆದ ಸಿದ್ದರಾಮಯ್ಯನವರು ಪ್ರೋತ್ಸಾಹಿಸುವ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯನವರ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳೂ ಭಯೋತ್ಪಾದಕರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದು, ಇದು ಖಂಡನೀಯ” ಎಂದು ಗೋವಿಂದ ಕಾರಜೋಳ ಹೇಳಿದರು.
ಈ ವೇಳೆ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕ ವಿಶ್ವನಾಥ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.