ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ, ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಮುನಿರತ್ನ, ತಮ್ಮನ್ನು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾರೆ. ವಿಧಾನಸೌಧ ತಮ್ಮ ಕಚೇರಿಯಲ್ಲಿಯೂ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಇತ್ತೀಚೆಗೆ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.
ಬಳಿಕ, ಜಾಮೀನು ಕೋರಿ ಮುನಿರತ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ ಜಾಮೀನು ನೀಡಿದೆ.
ಈ ಹಿಂದೆ, ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಜಾತಿ ನಿಂದನೆ ಮಾಡಿದ್ದ ಪ್ರಕರಣದಲ್ಲಿಯೂ ಮುನಿರತ್ನ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿತ್ತು. ಆ ಪ್ರಕರಣದಲ್ಲಿಯೂ ಮುನಿರತ್ನಗೆ ಇತ್ತೀಚೆಗೆ ಜಾಮೀನು ದೊರೆತಿತ್ತು. ಆದರೆ, ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ದೊರೆಯದ ಕಾರಣ ಮುನಿರತ್ನ ಜೈಲಿನಲ್ಲಿಯೇ ಇದ್ದರು. ಇದೀಗ ಆ ಪ್ರಕರಣದಲ್ಲಿಯೂ ಜಾಮೀನು ದೊರೆತಿದೆ.