ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಈ ತಿಂಗಳ 18ರಂದು ನಡೆಯುವ ಸಚಿ ಸಂಪುಟ ಸಭೆ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಸಂಬಂಧ ತೀರ್ಮಾನ ಮಾಡಬೇಕು, ತಪ್ಪಿದಲ್ಲಿ ರಾಜ್ಯಾದ್ಯಂತ ಮುಖ್ಯಮಂತ್ರಿ, ಮಂತ್ರಿಗಳನ್ನು ಘೇರಾವ್ ಮಾಡಲಾಗುವುದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸುರಿಯುವ ಮಳೆಯಲ್ಲೂ ಪ್ರತಿಭಟನಾಕಾರರು ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಒಳ ಮೀಸಲಾತಿ ವರ್ಗೀಕರಣ ಜಾರಿಗೆ ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಮಾತನಾಡಿ, ಕಳೆದ ಆಗಸ್ಟ್ 1ರಂದು ಸವೋಚ್ಛ ನ್ಯಾಯಾಲಯದ ಏಳು ಸದಸ್ಯರ ಪೂರ್ಣ ಪೀಠವು ಎಸ್.ಸಿ., ಎಸ್.ಟಿ. ಮೀಸಲಾತಿಯಲ್ಲಿ ಒಳಮೀಸಲಾತಿ ಉಪವರ್ಗೀಕರಿಸಲು ಆಯಾ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವಿದೆ ಎಂದು ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಅವಕಾಶ ವಂಚಿತ ನಾಡಿನ ಮಾದಿಗ ಸಮುದಾಯ ಸ್ವಾಗತಿಸಿದೆ. ಆದರೆ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತರಲು ಮೀನಾಮೇಷ ಎಣಿಸುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು 6ನೇ ಗ್ಯಾರಂಟಿ ಘೋಷಿಸಿಕೊಂಡಂತೆ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕಲಾಗಿದೆ. ಒಳಮೀಸಲಾತಿಯಲ್ಲಿ ವರ್ಗೀಕರಿಸಿ ಜಾರಿಗೊಳಿಸಬೇಕೆಂದು ಮೂರು ದಶಕಗಳಿಂದ ಹೋರಾಟಗಳು ನಡೆದಿವೆ. ಹಿಂದಿನ ಬಿಜೆಪಿ ಸರ್ಕಾರ ಎಸ್.ಸಿ.ಮೀಸಲಾತಿಯ ಎಲ್ಲಾ ಫಲಾನುಭವಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನಸಂಖ್ಯೆಗೆ ಅನುಗುಣವಾಗಿಯೇ ವೈಜ್ಞಾನಿಕವಾದ ಒಳಮೀಸಲಾತಿ ಸೂತ್ರವನ್ನು ರೂಪಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಇದನ್ನೇ ಮಾನದಂಡವಾಗಿಟ್ಟುಕೊಂಡು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ವೈ.ಹೆಚ್.ಹುಚ್ಚಯ್ಯ ಒತ್ತಾಯಿಸಿದರು.

ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್ ಮಾತನಾಡಿ, ಬರುವ 18 ರಂದು ನಡೆಯುವ ವಿಧಾನ ಸಭಾ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ಮಾದಿಗ ಸಮುದಾಯ ತೀವ್ರತರಹದ ಹೋರಾಟಕ್ಕಿಳಿಯುತ್ತದೆ. ಶಾಸಕರ ಮನೆ ಮುಂದೆ ಧರಣಿ ಮಾಡಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದರು.ಒಳಮೀಸಲಾತಿಗಾಗಿ ನಾವು 30 ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದೇವೆ, ನಮ್ಮ ತಾಳ್ಮೆ ಮೀರಿದೆ. ಮುಂಬರುವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟ ಉಗ್ರರೂಪ ತಾಳುತ್ತದೆ. ಮುಖ್ಯಮಂತ್ರಿ, ಮಂತ್ರಿಗಳನ್ನು ಘೇರಾವ್ ಮಾಡುತ್ತೇವೆ, ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ಮುಖಂಡ, ನಿವೃತ್ತ ಐಎಎಸ್ ಅಧಿಕಾರಿ ಬಿ.ಹೆಚ್.ಅನಿಲ್‌ಕುಮಾರ್ ಮಾತನಾಡಿ, ದತ್ತಾಂಶ ಲಭ್ಯವಿಲ್ಲ ಎಂಬ ಸಬೂಬನ್ನು ಒಡ್ಡಿ ಒಳಮೀಸಲಾತಿ ವರ್ಗೀಕರಣವನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಸರ್ಕಾರದ ಈ ಧೋರಣೆ ಸರಿಯಲ್ಲ. ಸರ್ಕಾರದ ಮುಂದಿರುವ ಅನೇಕ ವರದಿಗಳಲ್ಲಿ ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯ ಹಾಗೂ ಸವಲತ್ತುಗಳಿಂದ ವಂಚಿತವಾಗಿರುವ ದತ್ತಾಂಶಗಳ ವಿವರಗಳು ಲಭ್ಯವಿರುತ್ತವೆ ಎಂದು ಹೇಳಿದರು.ಒಳಮೀಸಲಾತಿ ಜಾರಿಯಾಗುವ ತನಕ ಸರ್ಕಾರ ಬ್ಯಾಕ್‌ಲಾಗ್ ಹುದ್ದೆ ಸೇರಿದಂತೆ ಹೊಸದಾಗಿ ಯಾವುದೇ ಹುದ್ದೆಗಳ ನೇಮಕಾತಿಮಾಡಬಾರದು. ಒಳಮೀಸಲಾತಿ ಜಾರಿ ಮಾಡದಿದ್ದರೆ ಮುಂದೆ ಮಾದಿಗ ಸಮುದಾಯ ಸರ್ಕಾರವನ್ನು ಅಧಿಕಾರದಿಂದ ಕೆಳಗಿಸುವವರೆಗೂ ಉಗ್ರ ಹೋರಾಟ ಮಾಡುವುದಾಗಿ ಅನಿಲ್‌ಕುಮಾರ್ ಎಚ್ಚರಿಕೆ ನೀಡಿದರು.

ಐಬಿಜೆಪಿ ಮುಖಂಡ ಡಾ.ಲಕ್ಷ್ಮೀಕಾಂತ್ ಮಾತನಾಡಿ, ಒಳಮೀಸಲಾತಿ ಜಾರಿ ಮಾಡಲು ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿ ಮಾಡದೆ ಸಮಿತಿ ಮಾಡುತ್ತೇವೆ, ಹೈಕಮಾಂಡ್ ಕೇಳಿ ತೀರ್ಮಾನ ಮಾಡುತ್ತೇವೆ ಎಂಬ ನೆಪ ಹೇಳುತ್ತಿದ್ದಾರೆ. ಜಾರಿ ಮಾಡದಂತೆ ತಡೆಯುವ ಹುನ್ನಾರ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಟೀಕಿಸಿದರು.ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುತ್ತೇವೆ, ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇವೆ ಎಂದು ಭಾಷಣ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಡೆದುಕೊಂಡು ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಡಾ.ಲಕ್ಷ್ಮೀಕಾಂತ್ ಆಗ್ರಹಿಸಿದರು.

ಶಾಸಕ ಸುರೇಶ್‌ಗೌಡ ಮಾತನಾಡಿ ಮಾದಿದ ಸಮುದಾಯದ ಹೋರಾಟ, ಬೇಡಿಕೆ ನ್ಯಾಯಯುತವಾಗಿದೆ. ಇದೇ ಕಾರಣಕ್ಕೆ ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿ ಜಾರಿಗೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದರೂ ಜಾರಿ ಮಾಡುವಲ್ಲಿ ನಿರ್ಲಕ್ಷ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿದರು. ಈ ಬಗ್ಗೆ ತಾವು ವಿಧಾನ ಸಭೆ ಅಧಿವೇಶನದಲ್ಲಿ ಧ್ವನಿ ಮಾಡುವುದಾಗಿ ಹೇಳಿದರು.
ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಬಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಹೆಚ್.ಎ.ಆಂಜನಪ್ಪ, ಗುಬ್ಬಿಯ ಜೆಡಿಎಸ್ ಮುಖಂಡ ನಾಗರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಗನ್ನಾಥ್, ಮುಖಂಡರಾದ ಮಾರುತಿ ಗಂಗಹನುಮಯ್ಯ, ವೆಂಕಟೇಶ್, ಮರಿಚೆನ್ನಮ್ಮ, ನರಸೀಯಪ್ಪ, ಪಿ.ಎನ್.ರಾಮಯ್ಯ, ಹೊಸಕೋಟೆ ನಟರಾಜು, ಹನುಮಂತರಾಯಪ್ಪ ಸೇರಿದಂತೆ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
