ಪೊಲೀಸ್ ಹುತಾತ್ಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ದೊಡ್ಡ ಗೌರವಕ್ಕೆ ಸಮಾನ. ಅವರ ತ್ಯಾಗದ ಮುಂದೆ ನಮ್ಮ ಸೇವೆ ಏನೇನೂ ಅಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹೇಳಿದರು.
ಮೈಸೂರು ಪೊಲೀಸ್ ಹುತಾತ್ಮ ಸ್ಮಾರಕ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ‘ಪೊಲೀಸ್ ಹುತಾತ್ಮʼರ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಪ್ರಾಣ ತ್ಯಾಗ ಮಾಡಿರುವವರು ಸ್ಪೂರ್ತಿಯಾಗುತ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರನ್ನು ಸ್ಮರಿಸುವ ದಿನವಾಗಿದ್ದು, ದೇಶದಲ್ಲಿ ಕರ್ತವ್ಯಕ್ಕಾಗಿ ಜೀವನವನ್ನೇ ತ್ಯಾಗ ಮಾಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯವರನ್ನು ಸ್ಮರಿಸಬೇಕು” ಎಂದು ಹೇಳಿದರು.
ಹುತಾತ್ಮರ ದಿನಾಚರಣೆ ಅಂಗವಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಲಾಯಿತು. ಪೊಲೀಸ್ ಧ್ವಜವನ್ನು ಅರ್ಧಕ್ಕೆ ಇಳಿಸಿ, ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗ್ಗಡೆ, ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ, ದಕ್ಷಿಣ ವಲಯದ ಡಿಐಜಿಪಿ ಡಾ ಎಂ ಬಿ ಬೋರಲಿಂಗಯ್ಯ, ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

ಚಾಮರಾಜನಗರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ, ಕರ್ತವ್ಯ ಪಾಲನೆಯಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಗೌರವ ವಂದನೆ ಸಲ್ಲಿಸಿ ಸ್ಮರಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಗುಬ್ಬಿ | ತೊರೇಹಳ್ಳಿ ಅಣೆಯಲ್ಲಿ ಕೊಚ್ಚಿ ಹೋದ ಗೂಡ್ಸ್ ವಾಹನ : ಹೊರ ಜಿಗಿದು ಪಾರಾದ ಚಾಲಕ
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾಧಿಕಾರಿ ಶಿಲ್ಪಾನಾಗ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಮುಖ್ಯ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಇತರೆ ಗಣ್ಯರು ಹುತಾತ್ಮರಾದ ಪೊಲೀಸ್ ಅಧಿಕಾರಿಗಳನ್ನು ಸ್ಮರಿಸಿದರು.