ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಹಳಷ್ಟು ನಾಟಕೀಯ ಬೆಳವಣಿಗೆ ನಡೆದ ನಂತರ ಗುರುವಾರ ಎನ್‌ಡಿಎ ಅಭ್ಯರ್ಥಿ ಯಾರು ಎಂಬುದಕ್ಕೆ ಉತ್ತರ ಸಿಕ್ಕಿದೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯನ್ನಾಗಿ ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಜಂಟಿಯಾಗಿ ಘೋಷಿಸಿದರು.
ನಿಖಿಲ್ ಕುಮಾರಸ್ವಾಮಿ ಅವರು 2019ರಲ್ಲಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ವಿರುದ್ಧ ಸೋಲು ಅನುಭವಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಿ, ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ತಂತ್ರಗಳೆಲ್ಲ ತಲೆಕೆಳಗಾಗಿವೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕೊನೆಯ ದಿನವಾಗಿದ್ದು, ಇಂದು (ಅ.24) ಅಭ್ಯರ್ಥಿ ಆಯ್ಕೆ ಸಂಬಂಧ ಯಡಿಯೂರಪ್ಪ ಅವರ ಮನೆಯಲ್ಲಿ ಇದೇ ಮೊದಲ ಬಾರಿಗೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸಮನಯ್ವ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಹಾಗೂ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ನಾಯರು ಸೇರಿ ಸಭೆಯಲ್ಲಿ ಭಾಗಿಯಾಗಿದ್ದರು.
ಅಭ್ಯರ್ಥಿ ಆಯ್ಕೆ ಪಟ್ಟಿಯಲ್ಲಿ ಚನ್ನಪಟ್ಟಣ ತಾಲೂಕು ಅಧ್ಯಕ್ಷ ಜಯಮುತ್ತು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಸಂಸದ ಡಾ. ಸಿ ಎನ್ ಮಂಜುನಾಥ್ ಅವರ ಪತ್ನಿ ಅನುಸೂಯಾ ಸೇರಿದಂತೆ ಇನ್ನೂ ಕೆಲವರ ಹೆಸರು ಇದ್ದವು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಚನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರು ಪ್ಲೆ ಕಾರ್ಡ್ ಹಿಡಿದುಕೊಂಡು ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಕೊಡುವಂತೆ ಆಗ್ರಹಿಸಿದರು. ಜೆಪಿ ಭವನದಲ್ಲಿ ಸೇರಿದ್ದ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತತು ಬೇಕೇ ಬೇಕು ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿ ಬೇಕು ಎಂದು ಆಗ್ರಹಿಸಿದ್ದರು.
