ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗದೆ ಅಸಮಾಧಾನಗೊಂಡು ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿಸಿದ್ದಾರೆ. ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಂತೆಯೇ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಶಾಸಕರು ಪಕ್ಷಾಂತರಗೊಳ್ಳುವ ಬಗ್ಗೆ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಠಿಯಾಗಿದೆ.
ಇತ್ತ, ಶೀಘ್ರವೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ-ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಒಂದು ಹೆಜ್ಜೆ ಮುಂದೆ ಹೋಗಿ, ‘2028ರ ಚುನಾವಣೆಗೂ ಮುನ್ನ ನಾನು ಮತ್ತೆ ಮುಖ್ಯಮಂತ್ರಿ ಆಗುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಈ ನಡುವೆ, ‘8 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ’ ಎಂದು ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಸೋಮಶೇಖರ್, “ಬಿಜೆಪಿಯ 8 ಮಂದಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ. ಅವರಲ್ಲಿ, ಇಬ್ಬರು ಶಾಸಕರು ಬೆಂಗಳೂರಿನವರೇ ಆಗಿದ್ದಾರೆ” ಎಂದು ಹೇಳಿದ್ದಾರೆ.
“ಈ ಹೇಳಿಕೆ ನೀಡಿದ್ದಕ್ಕೆ ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಜರುಗಿಸಬಹುದು. ಆ ಬಗ್ಗೆ ನನಗೆ ಭಯವಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು ಎಂಬುದೇ ನನ್ನ ಗುರಿ. ಅದಕ್ಕಾಗಿಯೇ ನಾನು ಆಗ್ಗಾಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಭೇಟಿ ಮಾಡುತ್ತೇನೆ. ಆರ್ ಅಶೋಕ್ ಮಾತಿಗೆ ಬೆಲೆ ಕೊಡಬಾರದು” ಎಂದಿದ್ದಾರೆ.
ಅಂದಹಾಗೆ, 2023ರ ಚುನಾವಣೆ ನಡೆದು, ಕಾಂಗ್ರೆಸ್ ಸರ್ಕಾರ ರಚಿಸಿದ ನಂತರದಲ್ಲಿ ಎಸ್.ಟಿ ಸೋಮಶೇಖರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳು ಆಗ್ಗಾಗ್ಗೆ ಸುದ್ದಿಯಾಗುತ್ತಲೇ ಇವೆ. ಆದರೆ, ಅವರು ಈವರೆಗೂ ತಾವು ಕಾಂಗ್ರೆಸ್ ಸೇರುವ ಬಗ್ಗೆ ಮಾತನಾಡಿಲ್ಲ. ಇದೀಗ, 8 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುತ್ತಾರೆಂದು ಹೇಳಿಕೊಂಡಿದ್ದಾರೆ. ಆ 8 ಮಂದಿಯಲ್ಲಿ ಸೋಮಶೇಖರ್ ಕೂಡ ಒಬ್ಬರಾಗಬಹುದು ಎಂಬ ಅನುಮಾನ ಮತ್ತೆ ಮುನ್ನೆಲೆಗೆ ಬಂದಿದೆ.