ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯ ಹೊಣೆಯನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಸಭೆಯು ಸರ್ವಾನುಮತದಿಂದ ನಿರ್ಧರಿಸಿದೆ. ಸೋಮವಾರ ಅಥವಾ ಮಂಗಳವಾರ ಈ ಕುರಿತಾಗಿ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.
ಬೆಂಗಳೂರಿನ ವಸಂತನಗರದಲ್ಲಿರುವ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಎಐಸಿಸಿಯಿಂದ ವೀಕ್ಷಕರಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಹಾಗೂ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಾಬರಿಯಾ ಭಾಗವಹಿಸಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. ಈ ವರದಿಯನ್ನು ಹೈಕಮಾಂಡ್‌ಗೆ ನೀಡಲಿದ್ದಾರೆ.
ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು, ʻಶಾಸಕಾಂಗ ಪಕ್ಷದ ನಾಯಕರ ಆಯ್ಕೆಯ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷರ ವಿವೇಚನೆಗೆ ಬಿಡುವ ನಿರ್ಣಯವನ್ನು ಸಿದ್ದರಾಮಯ್ಯ ಅವರು ಸಭೆಯಲ್ಲಿ ಮಂಡಿಸಿದ್ದರು. ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ 135 ಶಾಸಕರು ಸಿದ್ದರಾಮಯ್ಯ ಅವರ ನಿರ್ಣಯವನ್ನು ಸರ್ವಾನುಮತದಿಂದ ಅನುಮೋದಿಸಿದ್ದಾರೆʼ ಎಂದರು.
ಎಐಸಿಸಿಯ ಮೂವರು ಹಿರಿಯ ವೀಕ್ಷಕರು ಎಲ್ಲಾ ಶಾಸಕರ ವೈಯಕ್ತಿಕ ಅಭಿಪ್ರಾಯಗಳನ್ನು ಸಂಗ್ರಹಿಸಿ ಎಐಸಿಸಿ ಅಧ್ಯಕ್ಷರಿಗೆ ತಲುಪಿಸಲಿದ್ದಾರೆ ಎಂದು ಸುರ್ಜೆವಾಲ ಹೇಳಿದ್ದಾರೆ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಕಾಂಗ್ರೆಸ್ ಶಾಸಕರು ಭಾಗವಹಿಸಿದ್ದ ಸಭೆಯಲ್ಲಿ ಒಮ್ಮತದಿಂದ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ವಿವೇಚನೆಗೆ ಬಿಡಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ, ನಾಯಕರಾದ ಬಿ ಕೆ ಹರಿಪ್ರಸಾದ್, ಎಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಸಲೀಮ್ ಮೊಹಮ್ಮದ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರಾಮಲಿಂಗರೆಡ್ಡಿ, ಚಂದ್ರಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.