ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 2 ಕೋಟಿ ರೂ. ಸುಲಿಗೆ ಮಾಡಿದ್ದಾರೆಂಬ ಆರೋಪದಡಿ ಬಂಧನದಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಪ್ರಾಸಿಕ್ಯೂಷನ್‌ಗೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ ₹2 ಕೋಟಿ ಸುಲಿಗೆ ಮಾಡಿದ್ದಾರೆ ಎಂಬ ಆರೋಪವನ್ನು ಗೋಪಾಲ ಜೋಶಿ ಎದುರಿಸುತ್ತಿದ್ದಾರೆ.
ಪ್ರಕರಣ ರದ್ದು ಕೋರಿ ಗೋಪಾಲ ಜೋಶಿ ಪರ ಹೈಕೋರ್ಟ್‌ನ ಹಿರಿಯ ವಕೀಲ ಡಿ.ಆರ್.ರವಿಶಂಕರ್, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಗುರುವಾರ ಮೆಮೊ ಸಲ್ಲಿಸಿದ್ದರು. ಮೆಮೊ ಪರಿಶೀಲಿಸಿದ ನ್ಯಾಯಮೂರ್ತಿಗಳು ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದರು.
”ಈ ಪ್ರಕರಣ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದ್ದಾಗಿದೆ. ಕಳೆದ ಮಾರ್ಚ್, ಏಪ್ರಿಲ್, ಮೇ ಹಾಗೂ ಆಗಸ್ಟ್‌ನಲ್ಲಿ ಘಟನಾವಳಿ ನಡೆದಿವೆ ಎಂದು ಆಪಾದಿಸಲಾಗಿದೆ. ಆದರೆ, ಇದೇ 17ರಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಗೋಪಾಲ ಜೋಶಿ ಸೇರಿ ನಾಲ್ವರನ್ನು ಬಂಧಿಸಲಾಗಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ, ಇನ್ನಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ರವಿಶಂಕರ್ ನ್ಯಾಯಾಧೀಶರಿಗೆ ಮಾಹಿತಿ ನೀಡಿದರು.
ಹೆಚ್ಚುವರಿ ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ”ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಲಾದ ಈ ವಿಚಾರವು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿಯಲ್ಲಿ ನಡೆದಿದೆ. ಈ ಕುರಿತು ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ”ಇದೇ 28ರಂದು ಪ್ರಕರಣದ ವಿಚಾರಣೆ ನಡೆಸಲಾಗುವುದು. ಅಂದು ಪ್ರಕರಣದ ದಾಖಲೆಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿ” ಎಂದು ಪ್ರಾಸಿಕ್ಯೂಷನ್‌ಗೆ ತಾಕೀತು ಮಾಡಿದರು.
ಗೋಪಾಲ ಜೋಶಿ ಮತ್ತು ಅವರ ಪುತ್ರ ಅಜಯ್ ಜೋಶಿ ಅವರನ್ನು ನ್ಯಾಯಾಲಯ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಅಥಣಿಯ ಎಂಜಿನಿಯರ್ ಸೋಮಶೇಖರ್ ನಾಯಕ್ ಹಾಗೂ ಬಸವೇಶ್ವರ ನಗರದ ವಿಜಯಕುಮಾರಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುನೀತಾ ಚವ್ಹಾಣ್ ನೀಡಿರುವ ದೂರಿನ ಅನ್ವಯ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.