ಅಕ್ಟೋಬರ್ ತಿಂಗಳಿನಲ್ಲಿ ಸುರಿದ ಹಿಂಗಾರು ಮಳೆಯಿಂದಾಗಿ ರಾಜ್ಯದಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಪ್ರಮಾಣದಲ್ಲಿ ಆಸ್ತಿ-ಆಸ್ತಿ, ಬೆಳೆ ನಾಶವಾಗಿದೆ ಎಂದು ಸರ್ಕಾರ ತಿಳಿಸಿದೆ.
ಹಿಂಗಾರು ಮಳೆಯಿಂದಾದ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಹಿಂಗಾರು ಮಳೆ ವಾಡಿಕೆಗಿಂತ 58% ಹೆಚ್ಚು ಸುರಿದಿದೆ. ಒಟ್ಟು 25 ಸಾವುಗಳು ಸಂಭವಿಸಿವೆ. ಮೃತರ ಕುಟುಂಬಗಳಿಗೆ ತುರ್ತು ಪರಿಹಾರ ನೀಡಲಾಗಿದೆ” ಎಂದು ಹೇಳಿದ್ದಾರೆ.
“ಮಳೆಯ ಅಬ್ಬರಕ್ಕೆ 84 ಮನೆಗಳು ಸಂಪೂರ್ಣ ಹಾನಿಯಾಗಿವೆ. 2,077 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಲಾಗಿದೆ. ಒಟ್ಟು 74,993 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ, 30,941 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ನಾಶವಾಗಿರುವುದಾಗಿ ಅಂದಾಜಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 551.25 ಕೋಟಿ ರೂ. ಹಾಗೂ ತಹಶೀಲ್ದಾರ್ ಅವರ ಖಾತೆಯಲ್ಲಿ 115.71 ಕೋಟಿ ರೂ. ಹಣವಿದೆ. ಮುಂಗಾರು ಮಳೆಯ ಸಮಯದಲ್ಲಿಯೂ 80 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಬೆಳೆ ಪರಿಹಾರ ನೀಡಲಾಗುತ್ತಿದೆ” ಎಂದು ವಿವರಿಸಿದ್ದಾರೆ.