ಬೀದರ್ ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಯ ಹಿಂದಿನ ನಿರ್ದೇಶಕರಾಗಿದ್ದ ಡಾ.ಶಿವಕುಮಾರ್ ಶೆಟಕಾರ್ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಈ ಕುರಿತು ಬುಧವಾರ ಬ್ರಿಮ್ಸ್‌ಗೆ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ʼನಿರ್ದೇಶಕ ಶಿವಕುಮಾರ ಶೆಟಕಾರ ಅಧಿಕಾರಾವಧಿಯಲ್ಲಿ ಬ್ರಿಮ್ಸ್ ಆಸ್ಪತ್ರೆಯ ಸ್ಥಿತಿ ಹದೆಗೆಟ್ಟಿದ್ದು, ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ, ಯಾವುದೇ ಅಧಿಸೂಚನೆ ಹೊರಡಿಸದೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು. ಬೀದರ ಜಿಲ್ಲೆಯ ಜನತೆಗೆ ಆರೋಗ್ಯ ಕಾಪಾಡುವ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಹಿಂದಿನ ನಿರ್ದೇಶಕ ಶಿವಕುಮಾರ ಶೆಟಕಾರ ವಿಫಲರಾಗಿದ್ದರುʼ ಎಂದು ದೂರಿದ್ದಾರೆ.
ʼಕರ್ತವ್ಯ ಲೋಪ, ಭ್ರಷ್ಟಾಚಾರ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ತಾವು 15 ದಿವಸಗಳ ಒಳಗಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದುʼ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ : ಯುವ ರೈತನ ಕೈಹಿಡಿದ ಚೆಂಡು ಹೂವು ಕೃಷಿ
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ರಾಕೇಶ್ ಧನರಾಜ್, ಜಿಲ್ಲಾಧ್ಯಕ್ಷ ವಿಲ್ಸನ್ ದೊಡ್ಡನಿ, ಯುವ ಘಟಕದ ಅಧ್ಯಕ್ಷ ಗುರುದಾಸ ಅಮದಲಪಾಡ ಸೇರಿದಂತೆ ಇತರರಿದ್ದರು.