ನನ್ನ ಹೇಳಿಕೆ ತಿರುಚಲಾಗಿದೆ, ಅಸೂಯೆಯಿಂದ ಕುಮಾರಸ್ವಾಮಿ ಟೀಕಿಸಿದ್ದಾರೆ: ಡಿ ಕೆ ಶಿವಕುಮಾರ್

Date:

Advertisements

ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, “ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಗಳವರು , ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ” ಎಂದರು.

“ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇ.7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ. ಕಾಂಗ್ರೆಸ್ ಅಧ್ಯಕ್ಷನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಐದೂ ಗ್ಯಾರಂಟಿ ಯೋಜನೆ ಮುಂದುವರಿಯುತ್ತವೆ” ಎಂದು ಹೇಳಿದರು.

Advertisements

ಯಾರಿಗೆ ಬೇಕೋ ಅವರು ಟಿಕೆಟ್ ಖರೀದಿ ಮಾಡಿ ಪ್ರಯಾಣ ಮಾಡಬಹುದಲ್ಲವೇ? ಪರಿಷ್ಕರಣೆ ಯಾಕೆ ಎಂದು ಕೇಳಿದಾಗ, “ಆ ರೀತಿ ಮಾಡಲು ಸಾರಿಗೆ ಸಿಬ್ಬಂದಿಗಳಿಗೆ ಸರ್ಕಾರ ಅನುಮತಿ ನೀಡಬೇಕಲ್ಲವೇ? ಇಲ್ಲದಿದ್ದರೆ ಕಂಡಕ್ಟರ್ ಗಳು ಮಹಿಳೆಯರಿಂದ ಹಣ ಪಡೆಯಲು ಹಿಂಜರಿಯುತ್ತಾರೆ. ನಾಳೆ ನೀವೇ ಹೇಳಬಹುದು, ಮಹಿಳೆಯರಿಂದ ಬಲವಂತವಾಗಿ ಹಣ ಕೀಳುತ್ತಿದ್ದಾರೆ ಎಂದು. ಹೀಗಾಗಿ ಕೆಲವು ಮಹಿಳಾ ಪ್ರಯಾಣಿಕರು ನೀಡಿರುವ ಸಲಹೆ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ಈ ವಿಚಾರದಲ್ಲಿ ಯಾವುದೇ ಆತುರವಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಅಸೂಯೆಯಿಂದ ಕುಮಾರಸ್ವಾಮಿ ಟೀಕೆ

ರಾಜ್ಯ ಸರ್ಕಾರ ದಿವಾಳಿಯಾಗುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದಲೇ ಸರ್ಕಾರ ಪತನವಾಗಲಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಈ ಗ್ಯಾರಂಟಿ ಯೋಜನೆಗಳನ್ನು ಕಂಡು ಕುಮಾರಸ್ವಾಮಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಕಾಂಗ್ರೆಸ್ ನವರು 5 ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದಾರೆ. ನಿಮ್ಮ ಅಧಿಕಾರ ಅವಧಿಯಲ್ಲಿ ಇಂತಹ ಒಂದು ಯೋಜನೆ ಕೊಟ್ಟಿಲ್ಲ, ಬಡವರಿಗೆ ನಿವೇಶನ ಕೊಟ್ಟಿಲ್ಲ, ಊರು ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಯಾಕೆ ಮತ ಕೇಳುತ್ತೀರಿ ಎಂದು ಜನ ಅವರನ್ನು ಧಿಕ್ಕರಿಸುತ್ತಿದ್ದಾರೆ. ಅದನ್ನು ಸಹಿಸಲಾಗದೆ ನನಗೆ ಈ ಅವಕಾಶ ಸಿಗಲಿಲ್ಲವಲ್ಲ ಎಂದು ಕುಮಾರಸ್ವಾಮಿ ಅಸೂಯೆಯಿಂದ ತಮ್ಮ ಕೈ ಹಿಸುಕಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಬಿಜೆಪಿಗೆ ರಾಜಕೀಯ ಮಾಡಲು ಬೇರೆ ವಿಚಾರ ಇಲ್ಲ

ಸರ್ಕಾರದ ಸ್ಪಷ್ಟನೆ ಹೊರತಾಗಿಯೂ ಬಿಜೆಪಿ ವಕ್ಫ್ ವಿಚಾರದಲ್ಲಿ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರದ ವಿರುದ್ಧ ಟೀಕೆ ಮಾಡಲು ಬಿಜೆಪಿಯವರ ಬಳಿ ವಿಚಾರಗಳಿಲ್ಲ. ಹೀಗಾಗಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ಕಾಲದಲ್ಲೇ ಮೊದಲು ನೋಟಿಸ್ ನೀಡಲಾಗಿದೆ. ಕೋಮು ಗಲಭೆ ಸೃಷ್ಟಿಸಿ, ದೇಶ ಹಾಗೂ ರಾಜ್ಯ ಒಡೆಯಬೇಕು ಎಂಬುದು ಅವರ ಉದ್ದೇಶ” ಎಂದು ತಿಳಿಸಿದರು.

ಪ್ರಿಯಾಂಕಾ ಗಾಂಧಿ ಕೂಡ ವಯನಾಡಿಗೆ ವಲಸಿಗರು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರಾಗಲಿ, ಅವರ ಗೌಡರ ಕುಟುಂಬದವರಾಗಲಿ ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ. ಗಾಂಧಿ ಕುಟುಂಬ ದೇಶವನ್ನು ಒಂದಾಗಿ ಇಟ್ಟಿದೆ. ಆ ಕುಟುಂಬದ ಕೊಡುಗೆಯನ್ನು ಸರಿದೂಗಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ದಕ್ಷಿಣ ಭಾರತವನ್ನು ಪ್ರತಿನಿಧಿಸಿದ್ದರು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X