ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಕಾರ್ಮಿಕರು ಹಾಗೂ ಕಾರಂಜಾ ಸಂತ್ರಸ್ತರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕನ್ನಡ ರಾಜೋತ್ಸವ ದಿನಾಚರಣೆದಂದು ಬೀದರ್ ನಗರದಲ್ಲಿ ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದಲಿತ ರಕ್ಷಣಾ ಹೋರಾಟ ಸಮಿತಿ ಹಾಗೂ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ನೇತ್ರತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ನೆಹರೂ ಕ್ರೀಡಾಂಗಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಕರ್ನಾಟಕ ರಾಜೋತ್ಸವ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿದ ಬಳಿಕ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಬೀದರ ಸಹಕಾರ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ವೇತನ ಮತ್ತು ಕಾರಂಜಾ ಮುಳುಗಡೆ ಸಂತ್ರಸ್ತರ ವೈಜ್ಞಾನಿಕ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ನಡೆಸುವ ಮೂಲಕ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ. ಜಿಲ್ಲೆಯ ರೈತರ, ಕಾರ್ಮಿಕರ ಬೇಡಿಕೆ ಈಡೇರಿಸುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆʼ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಾರಂಜಾ ಜಲಾಶಯದಲ್ಲಿ ಭೂಮಿ, ಮನೆ ಕಳೆದುಕೊಂಡ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕಳೆದ ಎರಡೂವರೆ ವರ್ಷದಿಂದ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಚುನಾಯಿತ ಜನಪ್ರತಿನಿಧಿಗಳು ಇಲ್ಲಿಯವರೆಗೆ ಕೇವಲ ಆಶ್ವಾಸನೆ ನೀಡುತ್ತಲೇ ಬಂದಿದ್ದಾರೆ, ಹೊರತು ಪರಿಹಾರಕ್ಕಾಗಿ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಭೂಮಿ ಕಳೆದುಕೊಂಡ ರೈತರ ಬದುಕು ಅತಂತ್ರವಾಗಿದ್ದು, ನಗರಗಳಿಗೆ ವಲಸೆ ಹೋಗುತ್ತಿದ್ದಾರೆ’ ಎಂದರು.
ʼಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಾತನಾಡಿ, ‘ಕಳೆದ ಲೋಕಸಭಾ ಚುನಾವಣೆಯ ಮುಂಚೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನದ ವೇಳೆ ಕಾರಂಜಾ ಮುಳುಗಡೆ ಸಂತ್ರಸ್ತರ ಜೊತೆಗೆ ಸಭೆ ಕರೆದು ಬೇಡಿಕೆ ಕುರಿತು ಸಮಾಲೋಚನೆ ನಡೆಸಿ ಬೇಡಿಕೆ ಈಡೇರಿಸುವ ಕುರಿತು ಉನ್ನತ ಮಟ್ಟದ ಸಭೆ ಕರೆಯುವ ಬಗ್ಗೆ ಭರವಸೆ ನೀಡಿದರು. ಆದರೆ, ಇಲ್ಲಿಯವರೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.
ʼಬಿಎಸ್ಎಸ್‌ಕೆ ಕಾರ್ಮಿಕ ಸಂಘದ ಅರ್ಜುನ ತಮಗಿಕರ್ ಮಾತನಾಡಿ, ‘ಜಿಲ್ಲೆಯ ರೈತರ ಜೀವನಾಡಿಯಾಗಿದ್ದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಎಸ್ಕೆ) 2016ರಿಂದ ಸ್ಥಗಿತಗೊಂಡಿದೆ. ಇದರಿಂದ ಕೆಲಸ ಕಳೆದುಕೊಂಡ ಕಾರ್ಮಿಕರ ಬದುಕು ಬೀದಿಗೆ ಬಂದಿದೆ. ಅಲ್ಲದೇ ಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಾದ 32.99 ಕೋಟಿ ರೂ. ವೇತನ ಸಹ ಇಲ್ಲಿಯವರೆಗೆ ನೀಡಲಿಲ್ಲ. ಇದರಿಂದ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಒಂದು ತಿಂಗಳೊಳಗೆ ಬಾಕಿ ವೇತನ ಬಿಡುಗಡೆ ಮಾಡಬೇಕು.ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಂಟಿಯಾಗಿ ಉಗ್ರ ಹೋರಾಟ ರೂಪಿಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಕಾರ್ಮಿಕರ ವೇತನ ಹಾಗೂ ಕಾರಂಜಾ ಮುಳುಗಡೆ ಸಂತ್ರಸ್ತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಮುಖಾಂತರ ನೆಹರೂ ಕ್ರೀಡಾಂಗಣದ ಬಳಿ ಆಗಮಿಸಿ ನ್ಯಾಯಕ್ಕಾಗಿ ಘೋಷಣೆ ಕೂಗಿದರು. ಇದೇ ವೇಳೆ ನೆಹರೂ ಕ್ಕರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಸಾಗರ್ ಖಂಡ್ರೆ ಅವರು ರೈತರು ಪ್ರತಿಭಟನೆ ನಡೆಸುತ್ತಿರುವುದು ಕಂಡರೂ ರೈತರ ಬಳಿ ಆಗಮಿಸದೆ ಕಾರಿನಲ್ಲಿ ತೆರಳಿದ್ದರು. ಸಂಸದರ ಈ ನಡೆಯನ್ನು ಪ್ರತಿಭಟನಾ ನಿರತ ರೈತರು, ಕಾರ್ಮಿಕರು ಖಂಡನೆ ವ್ಯಕ್ತಪಡಿಸಿದ ಘಟನೆ ಜರುಗಿತು.
ಈ ಸುದ್ದಿ ಓದಿದ್ದೀರಾ? ‘ವಕ್ಫ್ ಆಸ್ತಿ ಅಲ್ಲಾಹನದ್ದು, ಮರಳಿ ಪಡೆಯಲು ಕಾಂಪ್ರಮೈಸ್ ಬೇಡ’ ಎಂದಿದ್ದ ಬೊಮ್ಮಾಯಿ; ಇಲ್ಲಿದೆ ದಾಖಲೆ
ಪ್ರತಿಭಟನೆಯಲ್ಲಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಸಂಸ್ಥಾಪಕ ಅಧ್ಯಕ್ಷ ಸ್ವಾಮಿದಾಸ ಕೆಂಪೆನೊರ್, ದಲಿತ ರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ ಹಳ್ಳಿಖೇಡ್, ಜಿಲ್ಲಾಧ್ಯಕ್ಷ ಸಂಜು ಉಜನಿ, ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಉಪಾಧ್ಯಕ್ಷ ಸಂಗಮೇಶ ಏಣಕೂರ ಸೇರಿದಂತೆ ಮಲ್ಲಿಕಾರ್ಜುನ ಭಂಡಾರಿ, ಶಿವರಾಜ್ ನೆಲವಾಳಕರ್, ಜೇಮ್ಸ್ ಇಸ್ಲಾಂಪುರ, ಸಂಜಯ ಪಾಟೀಲ, ಸಂಜೀವಕುಮಾರ ಅಲ್ಲೂರೆ, ಸೂರ್ಯಕಾಂತ ಬಲ್ಲೂರೆ ಸೇರಿದಂತೆ ಕಾರಂಜಾ ಮುಳುಗಡೆ ಸಂತ್ರಸ್ತರು, ಬಿಎಸ್‌ಎಸ್ಕೆ ಕಾರ್ಮಿಕರು ಪಾಲ್ಗೊಂಡಿದ್ದರು