ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎಂ ಎಸ್ ತಿಮ್ಮಪ್ಪ (83) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.
ಮನೆಯಲ್ಲಿ ಕಾಲು ಜಾರಿ ಬಿದ್ದು, ಮಿದುಳಿಗೆ ಪೆಟ್ಟು ಮಾಡಿಕೊಂಡಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ತಿಮ್ಮಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದವರು. ಮನೋವಿಜ್ಞಾನದ ಪ್ರೊಫೆಸರ್ ಆಗಿದ್ದ ಅವರು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಎರಡು ಅವಧಿಗಳಿಗೆ ಅದರ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದಾರೆ.
ಮನೋವಿಜ್ಞಾನದ ಪ್ರಾಧ್ಯಾಪಕರಾಗಿ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಬೋಧಿಸಿದ್ದಾರೆ. ಹಲವಾರು ಡಾಕ್ಟರೇಟ್ ಮತ್ತು ಎಂಫಿಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು ಮತ್ತು ಹಲವು ವರ್ಷಗಳ ಕಾಲ ಮನೋವಿಜ್ಞಾನ ವಿಭಾಗವನ್ನು ಮುನ್ನಡೆಸಿದ್ದಾರೆ. ಅವರು ತಮ್ಮ ಆಕರ್ಷಕ ವ್ಯಕ್ತಿತ್ವ, ಪರಿಣಾಮಕಾರಿ ಪರಸ್ಪರ ಸಂವಹನಕ್ಕೆ ಹೆಸರುವಾಸಿಯಾಗಿದ್ದರು. ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಿದ್ದ ಅವರು ಸಾರ್ವಜನಿಕ ಚರ್ಚೆಗಳಲ್ಲಿ ಸಕ್ರಿಯರಾಗಿರುತ್ತಿದ್ದರು.
2000ರಲ್ಲಿ ಮಗಳನ್ನು ಮತ್ತು 2007ರಲ್ಲಿ ಅವರ ಪತ್ನಿಯನ್ನು ಕಳೆದುಕೊಂಡು, ನಿವೃತ್ತಿಯ ನಂತರ ಏಕಾಂಗಿಯಾಗಿ ವಾಸಿಸುತ್ತಿದ್ದರು.