ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಏನಿದು ವಿವಾದ?
ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಂದಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
“ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಉಪಚುನಾವಣೆಗೂ ಮುನ್ನ ಮುಸ್ಲಿಂ ಮತಗಳ ಕ್ರೋಡೀಕರಣದ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರದ ಹೇಯ ನಡೆ ಇದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.
“ಟೆಂಡರ್ ಅನ್ನು ಕೆಟಿಟಿಪಿ ಕಾಯ್ದೆಯ ಆಧಾರದ ಮೇಲೆ ನೀಡಬೇಕೇ ವಿನಹ ಜಾತಿ ಪರಿಗಣನೆಯ ಮೇಲೆ ಅಲ್ಲ. ಮುಖ್ಯಮಂತ್ರಿಗಳು ಬೂಟಾಟಿಕೆಯನ್ನಲ್ಲ, ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು” ಎಂದು ಯತ್ನಾಳ್ ಹೇಳಿದ್ದಾರೆ.