ಮಕ್ಕಳು ಯಾವುದೇ ಸಮಸ್ಯೆಗಳಿದ್ದರೂ ಪೊಲೀಸ್ ಇಲಾಖೆಯನ್ನು ನೇರವಾಗಿ ಸಂಪರ್ಕಿಸಬಹುದು. ಯಾವುದೇ ಕಾರಣಕ್ಕೂ ಮಕ್ಕಳು ಪೊಲೀಸರಿಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಬಸವಕಲ್ಯಾಣ ಸಿಪಿಐ ಅಲಿಸಾಬ್ ಹೇಳಿದರು.
ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಮೈಸೂರು, ಬೀದರ್ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸಹಯೋಗದಲ್ಲಿ ಬಸವಕಲ್ಯಾಣದ ಬಸವ ಮಹಾಮನೆ ಆವರಣದಲ್ಲಿ ಸೋಮವಾರ ಜರುಗಿದ ʼಮಕ್ಕಳ ಸಂವಾದʼ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
‘ಮಕ್ಕಳು ಇಂದಿನ ಸಭೆಯಲ್ಲಿ ಹೇಳಿಕೊಂಡಿರುವ ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮ್ಮ ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ಪ್ರತಿ ಹಳ್ಳಿಗಳಿಗೂ ಭೇಟಿ ಮಾಡುವಂತೆ ತಿಳಿಸಲಾಗುವುದು’ ಎಂದರು.
ಬಸವಕಲ್ಯಾಣ ತಹಶೀಲ್ದಾರ್ ದತ್ತಾತ್ರೇಯ ಗಾದಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಂಸ್ಥೆಯು 9 ಗ್ರಾಮ ಪಂಚಾಯಿತಿಗಳಿಂದ 40 ಗ್ರಾಮಗಳಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಮಕ್ಕಳ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡುತ್ತೇನೆ’ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ನಾವು ಆಯೋಗದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂತಹ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಆದರೆ, ಇಂದು ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಶ್ಲಾಘನೀಯ’ ಎಂದರು.

ʼಮಕ್ಕಳ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಿ ಸೂಕ್ತ ನಿರ್ದೇಶನ ನೀಡುತ್ತೇವೆ. ಸರ್ಕಾರ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಈ ರೀತಿಯ ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹರಿಸಿದರೆ ಮಕ್ಕಳಿಗೆ ತಮ್ಮ ಹಕ್ಕುಗಳು ಸಂಪೂರ್ಣವಾಗಿ ಪಡೆಯುವಂತಾಗುತ್ತದೆ’ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಡಿಟಿಐ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ!
ಸಂಸ್ಥೆಯ ನಿರ್ದೇಶಕಿ ಸರಸ್ವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ್ ಶಿಂಧೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ಹಾಗೂ ಸಂಸ್ಥೆಯ ಸಿಬ್ಬಂದಿಗಳಾದ ಸಂಪತ್ ಕುಮಾರ, ಶಶಿಕುಮಾರ್ ಎಸ್. ನಾಗರಾಜ ಶೀಲವಂತ ಇದ್ದರು.