ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 110ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದಲ್ಲಿ ನಡೆದಿದೆ.
ಹೊನ್ನಳ್ಳಿ ಸಿದ್ದಪ್ಪನವರ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವಿಸುವಾಗ ಇಬ್ಬರು ವಿದ್ಯಾರ್ಥಿಗಳಿಗೆ ಊಟದಲ್ಲಿ ಹಲ್ಲಿ ಸಿಕ್ಕಿದ್ದು, ಇದರಿಂದಲೇ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ತಿಳಿದು ಬಂದಿದೆ.

40ಕ್ಕಿಂತ ಹೆಚ್ಚು ಮಕ್ಕಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಲಾಗಿದೆ. ಮೂವರು ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಜಿಲ್ಲಾ ವೈದ್ಯಕೀಯ ವಿಜ್ಞಾನ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಪರಿಹಾರ ವಿಳಂಬ; ಎಸಿ ಕಚೇರಿಯ ಪೀಠೋಪಕರಣಗಳನ್ನೇ ಹೊತ್ತೊಯ್ದ ಸಂತ್ರಸ್ತರು
ಈ ವಿಷಯ ಗ್ರಾಮದಲ್ಲಿ ಹರಡುತ್ತಿದ್ದಂತೆ ಪಾಲಕರು, ಪೋಷಕರು ಶಾಲೆ ಬಳಿ ಜಮಾಯಿಸಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಬಳಿಕ ಸ್ಥಳಕ್ಕೆ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
