ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿಯ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹೆಚ್ಚಿನ ಸ್ಥಳಗಳಲ್ಲಿ ಜಿಟಿಜಿಟಿ ಮಳೆ ಹಾಗೂ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜತೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗೆ ಶುಕ್ರವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ನವೆಂಬರ್ 15ರಂದು ಕರ್ನಾಟಕದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೊಂದು ಮಹಾ ಮರಮೇಧಕ್ಕೆ ಕೇಂದ್ರದ ಅನುಮತಿ ಅಮಾನುಷ
ನವೆಂಬರ್ 16ರಂದು ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ.
ನವೆಂಬರ್ 17ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಮೇಲೆ ಒಣಹವೆ ಇರುವ ಸಾಧ್ಯತೆ ಇದೆ.
ನವೆಂಬರ್ 18ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.