ವೇಶ್ಯಾವೃತ್ತಿ ನಡೆಸುತ್ತಿದ್ದಾರೆಂಬ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಸಾರ್ವಜನಿಕ ಸ್ಥಳಕ್ಕೆ ಎಳೆದೊಯ್ದು, ಆಕೆಯ ಬಟ್ಟೆ ಹರಿದು, ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ.
ವಡ್ಡರವಾಡಿಯಲ್ಲಿ ನೆಲೆಸಿದ್ದ ಮಹಿಳೆಯನ್ನು ನೆರೆಹೊರೆಯವರು ಬೀದಿಗೆ ಎಳೆದೊಯ್ದು ದೌರ್ಜನ್ಯ ಎಸಗಿದ್ದಾರೆ. ಕೃತ್ಯವನ್ನು ಕೆಲವರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರೂ, ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಆರೋಪವೂ ಇದೆ. ಆಕ್ರೊಶ ವ್ಯಕ್ತವಾದ ಬಳಿಕ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಡ್ಡರವಾಡಿಯ ಮನೆಯೊಂದರಲ್ಲಿ ಹಲ್ಲೆಗೊಳಗಾದ ಮಹಿಳೆಯೂ ಸೇರಿದಂತೆ ನಾಲ್ವರು ಕಳೆದ ನಾಲ್ಕು ವರ್ಷಗಳಿಂದ ವಾಸವಾಗಿದ್ದರು. ಆ ಮಹಿಳೆಯ ವಿಶ್ಯಾವೃತ್ತಿ ನಡೆಸುತ್ತಿದ್ದಾರೆಂದು ನೆರೆಹೊರೆಯವರು ಆರೋಪಿಸಿದ್ದು, ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ.
ಮಹಿಳೆಯ ದೂರಿನ ಆಧಾರದ ಮೇಲೆ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 115(2), 3(5), 331, 352 ಹಾಗೂ 74ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ, ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣ ನಡೆದಿತ್ತು.