ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಬೆಲ್ಲಂಗದಲ್ಲಿ ಭಾನುವಾರ ರಾತ್ರಿಯಿಡೀ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರ್ಮಿಕ ಸಮಾರಂಭವನ್ನು ಆಯೋಜಿಸಿದ್ದ ಸಮಿತಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸೇರಿ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದು ಸಮುದಾಯದ ಧಾರ್ಮಿಕ ಸಮಾರಂಭದಲ್ಲಿ ಆಪಾದಿತ ನಿಂದನೀಯ ಹೇಳಿಕೆಯನ್ನು ಪ್ರದರ್ಶಿಸಿದ್ದರಿಂದ ಮತ್ತೊಂದು ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿ ಘರ್ಷಣೆಗೆ ಕಾರಣ ಎನ್ನಲಾಗಿದೆ. ಘರ್ಷಣೆಯಲ್ಲಿ ಗಾಯಗೊಂಡಿರುವ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ಗುಂಪುಗಳ ಜನರ ನಡುವಿನ ಗಲಾಟೆ ನಂತರ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಹಲವಾರು ಮನೆಗಳನ್ನು ದೋಚಲಾಗಿದೆ. ಬೆಲ್ಲಂಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಂಸಾಚಾರ ಪ್ರದೇಶದಲ್ಲಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!
ಗಲಭೆ ಬಗ್ಗೆ ಪಶ್ಚಿಮ ಬಂಗಾಳ ಪೊಲೀಸರು ‘ಎಕ್ಸ್ ‘ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿದ್ದು, “ಹಿಂಸಾಚಾರ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ಎಲ್ಲಡೆ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಶಾಂತಿ ಕದಡಲು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನಕಲಿ ಪೋಸ್ಟ್‌ಗಳನ್ನು ನಂಬಬೇಡಿ. ಕಾನೂನು ಉಲ್ಲಂಘಿಸುವವರ ವಿರುದ್ಧ ಮತ್ತು ವದಂತಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.
ಎರಡು ಗುಂಪುಗಳ ನಡುವೆ ಘರ್ಷಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಪರಸ್ಪರ ಟೀಕೆಗಳಲ್ಲಿ ಮುಳುಗಿವೆ.