ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಮತ್ತಿತರರ ವಿರುದ್ಧದ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಕಾಯ್ದಿರಿಸಿದೆ.
ದೂರುದಾರ ಆದರ್ಶ್ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದು, ನಳಿನ್ ಕುಮಾರ್ ಕಟೀಲು ಪರ ಹಿರಿಯ ವಕೀಲ ಕೆ.ಜಿ.ರಾಘವನ್ ಪ್ರತಿವಾದ ಮಾಡಿದ್ದಾರೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪು ಕಾಯ್ದಿರಿಸಿದೆ. ಇನ್ನು ಪ್ರಕರಣದ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ವಿಸ್ತರಿಸಿದೆ.
ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್ ಪ್ರಕರಣ : ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬಿಜೆಪಿಯ ರಾಜ್ಯ, ರಾಷ್ಟ್ರ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ತಿಲಕ್ ನಗರ ಠಾಣೆಯಲ್ಲಿ ನಿರ್ಮಲಾ ಸೀತಾರಾಮನ್, ಜೆ ಪಿ ನಡ್ಡಾ, ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾದ ನಳಿನ್ ಕುಮಾರ್ ಕಟೀಲು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಬುಧವಾರ ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶ ಕಾಯ್ದಿರಿಸಿದೆ.
