ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯವು ಅಪರಾಧಿಗಳು ಎಂದು ಘೋಷಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಕೂಡ ಇಂಥದ್ದೇ ಮಹತ್ವದ ತೀರ್ಪನ್ನು ಬುಧವಾರ ಪ್ರಕಟಿಸಿದೆ.
ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳು ಎಂದು ತುಮಕೂರು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಬುಧವಾರ ತೀರ್ಪು ನೀಡಿದ್ದು, ಗುರುವಾರ (ನ.21)ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ಆದೇಶಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 27 ಆರೋಪಿಗಳಲ್ಲಿ ಆರು ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ಕೋರ್ಟ್ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸಲಿದೆ.

ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಎಂಬುವವರ ಕೊಲೆ ನಡೆದಿತ್ತು.
ಸುದೀರ್ಘ ಒಂದೂವರೆ ದಶಕಗಳ ಕಾಲ ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ಜ್ಯೋತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗೋಪಾಲಪುರದ ನಿವಾಸಿ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಇದೇ ವಿಚಾರವಾಗಿ ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.
ದಲಿತ ಸಮುದಾಯಕ್ಕೆ ಸೇರಿದ್ದ ಹೊನ್ನಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಗ್ರಾಮದಲ್ಲಿ ಮುಂದುವರಿದಿತ್ತು. ಕೊನೆಗೆ ಇದೇ ದ್ವೇಷದಲ್ಲಿ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. 2010ರಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು, ಬರೋಬ್ಬರಿ 14 ವರ್ಷಗಳ ನಂತರ ಮಹತ್ವದ ತೀರ್ಪು ಪ್ರಕಟಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳೆಂದು ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ- ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಎಂದು ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ, ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ.
