ರಾಜ್ಯ ಸರ್ಕಾರ ವಕ್ಫ್ ಮಂಡಳಿ ಹೆಸರಿನಲ್ಲಿ ರೈತರ ಪಹಣಿಗಳಲ್ಲಿ ಗೊಂದಲ ಸೃಷ್ಟಿಸಿ ಕಬಳಿಕೆ ಮಾಡುವ ಹುನ್ನಾರ ಮಾಡುತ್ತಿದೆ. ವಕ್ಫ್ ಮಂಡಳಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
“ಕಾಂಗ್ರೆಸ್ ಸರ್ಕಾರ ವಕ್ಫ್ ಹೆಸರಿನಲ್ಲಿ ದೇಗುಲಗಳ ಆಸ್ತಿಗೆ ಕೈ ಹಾಕುವ, ಶಾಂತಿ, ಸೌಹಾರ್ದತೆ, ಸಾಮರಸ್ಯದ ನಾಡನ್ನು ಆತಂಕದ ಸ್ಥಿತಿಗೆ ತಳ್ಳುತ್ತಿದೆ. ರೈತರ, ಮಠ ಮಂದಿರದ ಆಸ್ತಿಯನ್ನು ವಕ್ಫ್ ಆಸ್ತಿಯೆಂದು ದಾಖಲೆಗಳಲ್ಲಿ ಸೇರ್ಪಡೆ ಮಾಡಲಾಗುತ್ತಿದೆ. ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲು ಮುಂದಾಗಿದ್ದೇ ತಡ ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದ ಆಸ್ತಿಯನ್ನು ಕಬಳಿಸಲು ಹುನ್ನಾರ ನಡೆಸಿದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾನಿರತ ವಿಧಾನಪರಿಷತ್ ಮಾಜಿ ಸದಸ್ಯ ಎನ್ ಶಂಕ್ರಪ್ಪ ಮಾತನಾಡಿ, “ಸಚಿವ ಜಮೀರ್ ಅಹ್ಮದ್ ರಾಜ್ಯದ ಹಲವೆಡೆ ಭೇಟಿ ನೀಡಿ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿ, ಸರ್ಕಾರ ರೈತರ ಆಸ್ತಿಯನ್ನು ವಕ್ಫ್ ಹೆಸರಿಗೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಸಮುದಾಯವನ್ನು ಓಲೈಕೆ ಮಾಡಲು ಓಟ್ ಬ್ಯಾಂಕ್ ರಾಜಕಾರಣಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ” ಎಂದು ದೂರಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪೌತಿಖಾತೆ ಮಾಡಿಕೊಡಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ
“ವಕ್ಫ್ ಮಂಡಳಿಯಿಂದ ಆಗುತ್ತಿರುವ ಗೊಂದಲ ಸರಿಪಡಿಸಲು ರಾಜ್ಯ ಸರ್ಕಾರ ಮುಂದಾಗದೇ ಅಧಿಕಾರಿಗಳ ಸಭೆ ನಡೆಸಿ ಪಹಣಿಗಳಲ್ಲಿ ವಕ್ಫ್ ಆಸ್ತಿಯೆಂದು ನಮೂದು ಮಾಡದಂತೆ ತಾತ್ಕಾಲಿಕ ತಡೆ ನೀಡಿದ್ದಾರೆ. ಇದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಮುಂದೊಂದು ದಿನ ರೈತರಿಗೆ ಮರಣ ಶಾಸನವಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.
ಮುಖಂಡರಾದ ರಾಜಕುಮಾರ, ಶಿವಬಸಪ್ಪ ಮಾಲಿ ಪಾಟೀಲ, ಸುಮಾ ಅಶೋಕ ಗಸ್ತಿ, ಡಾ.ನಾಗರಾಜ ಬಾಲ್ಕಿ ಸೇರಿದಂತೆ ಇತರರು ಇದ್ದರು.
